ಹಾಸನ, ಜು. 11: ಹಾಸನ ಜಿಲ್ಲಾ ವಕೀಲರ ಸಂಘ, ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಸನಾಂಬ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಕೀಲರ ಸಂಘದ ಆವರಣವನ್ನು ಸ್ವಚ್ಛಗೊಳಿಸಿ, ಪರಿಸರ ಸಂರಕ್ಷಣೆಯ ಉದ್ದೇಶದಿಂದ ಆವರಣದ ಸುತ್ತ ಸುಮಾರು 50ಕ್ಕೂ ಹೆಚ್ಚು ಫಲಬಿಡುವ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸ್ವಚ್ಛತೆ ಮತ್ತು ಹಸಿರು ವಾತಾವರಣ ನಿರ್ಮಾಣಕ್ಕಾಗಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಜೆ.ಪಿ. ಶೇಖರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೊಗಣ್ಣಗೌಡ, ಉಪಾಧ್ಯಕ್ಷ ಎಂ.ಟಿ. ತಿಮ್ಮೇಗೌಡ, ಲಯನ್ಸ್ ಕ್ಲಬ್ ಹಾಸನಾಂಬ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ಕೆ.ಎಸ್. ಯೋಗೇಶ್ ಸೇರಿದಂತೆ ವಕೀಲರು, ಲಯನ್ಸ್ ಹಾಗೂ ರೋಟರಿ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಆಯೋಜಕರು ಕೃತಜ್ಞತೆ ಸಲ್ಲಿಸಿದರು.
