ಸಕಲೇಶಪುರ: ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ವಕ್ಕಲಿಗರ ಸಮುದಾಯ ಭವನದಲ್ಲಿ ಜೂನ್ 5ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ, ವೈಚಾರಿಕ ಸಂಜೆ ದಿನಪತ್ರಿಕೆ, ವಳಲಹಳ್ಳಿ ಗ್ರಾಮ ಪಂಚಾಯಿತಿ, ಬೆಳೆಗಾರರ ಸಂಘ, ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸಕಲೇಶಪುರ ಘಟಕ ಸೇರಿದಂತೆ ಹಲವು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಹೃದ್ರೋಗ, ಮಧುಮೇಹ, ಕಣ್ಣು, ಕಿವಿ-ಮೂಗು-ಗಂಟಲು, ಕೀಲು-ಮೂಳೆ, ಶಸ್ತ್ರಚಿಕಿತ್ಸೆ ಹಾಗೂ ಸ್ತ್ರೀರೋಗ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿ ಉಚಿತ ತಪಾಸಣೆ ಮತ್ತು ಸಲಹೆ ನೀಡಲಿದ್ದಾರೆ. ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೂ ವಿಶೇಷ ತಪಾಸಣೆ ಮತ್ತು ಮಾರ್ಗದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.
ಉಚಿತ ಇಸಿಜಿ, ರಕ್ತ ಪರೀಕ್ಷೆ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳು ನಡೆಯಲಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಉಚಿತ ವಾಹನ ವ್ಯವಸ್ಥೆಯೊಂದಿಗೆ ಕರೆದೊಯ್ಯುವ ಸೌಲಭ್ಯವೂ ಇರಲಿದೆ.
ಕಾರ್ಯಕ್ರಮವನ್ನು ಶಾಸಕ ಶ್ರೀ ಸಿಮೆಂಟ್ ಮಂಜು ಉದ್ಘಾಟಿಸಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
