ರಾಮನಾಥಪುರ: ಹೋಬಳಿಯ ಗಂಗೂರು ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕ ಎ. ಮಂಜು ಅವರು, ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಸಹಕಾರ ನೀಡುವ ಮೂಲಕ ಸಮುದಾಯ ಭವನವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿಕೊಳ್ಳಬೇಕು. ಭವನದ ನಿರ್ಮಾಣದ ಜೊತೆಗೆ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಗ್ರಾಮದ ಸಾರ್ವಜನಿಕರಿಗೆ ಸಭೆ-ಸಮಾರಂಭಗಳು, ಶುಭಕಾರ್ಯಗಳು ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವ ಉದ್ದೇಶದಿಂದ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರ ಸಹಕಾರದೊಂದಿಗೆ ಹಾಗೂ ಶಾಸಕರ ಹೆಚ್ಚಿನ ಅನುದಾನದ ನೆರವಿನಿಂದ ಸುಸಜ್ಜಿತ ಸಮುದಾಯ ಭವನ ನಿರ್ಮಾಣವಾಗಲಿದ್ದು, ಇದರಿಂದ ಗ್ರಾಮದ ಜನರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸಂತಸ ವ್ಯಕ್ತಪಡಿಸಿದರು.
– ಕುಮಾರಸ್ವಾಮಿ ಎಂ.ಎನ್.
