ಬೆಂಗಳೂರು, ಫೆಬ್ರವರಿ 23: ರಾಜ್ಯದ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗಾಗಿ ಮಹತ್ವದ ಬದಲಾವಣೆಯ ಸೂಚನೆ ನೀಡಿರುವ ಸರ್ಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ಚಿಂತನೆ ನಡೆಸುತ್ತಿದೆ. ವಿಶೇಷವಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಕುಲಪತಿಗಳಿಂದಲೂ ಅಭಿಪ್ರಾಯ ಪಡೆಯಲಾಗಿದೆ. ಅನೇಕ ದೇಶಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ನಿಯಮಗಳು ಇರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಓದು, ಗಮನ ಮತ್ತು ನಡವಳಿಕೆಗೆ ಹಾನಿ ಮಾಡುತ್ತಿದೆ ಎಂಬ ಕಾರಣದಿಂದ ಈ ಕ್ರಮದ ಅಗತ್ಯತೆ ಕುರಿತು ಚರ್ಚೆ ನಡೆದಿದೆ.
ಇದರ ಜೊತೆಗೆ ವಿಶ್ವವಿದ್ಯಾಲಯ ಕ್ಯಾಂಪಸ್ಗಳನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡ್ರಗ್ಸ್ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, ಕ್ಯಾಂಪಸ್ಗಳಲ್ಲಿ ತಪಾಸಣೆ ಮತ್ತು ಜಾಗೃತಿ ಕ್ರಮಗಳನ್ನು ಹೆಚ್ಚಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯ ಸರ್ಕಾರದ ಆದ್ಯತೆಯ ವಿಷಯವಾಗಿದೆ ಎಂದು ತಿಳಿಸಲಾಗಿದೆ.
ಸಭೆಯಲ್ಲಿ ವಿದ್ಯಾರ್ಥಿ ಚುನಾವಣೆಗಳ ಪುನರಾರಂಭದ ಕುರಿತೂ ಚರ್ಚೆ ನಡೆದಿದ್ದು, ನಿಯಮಗಳು ಮತ್ತು ಷರತ್ತುಗಳೊಂದಿಗೆ ಚುನಾವಣೆಗಳಿಗೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ನಾಯಕರ ಬೆಳವಣಿಗೆಗೆ ಇದು ಸಹಕಾರಿ ಆಗಬಹುದು ಎಂಬ ಅಭಿಪ್ರಾಯವೂ ಕೇಳಿಬಂದಿದೆ.
ಆದರೆ ಕಾಲೇಜುಗಳಲ್ಲಿ ಚುನಾವಣೆ ನಡೆಸುವ ವಿಚಾರಕ್ಕೆ ಕೆಲ ಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆಯಿಂದ ಕ್ಯಾಂಪಸ್ನಲ್ಲಿ ರಾಜಕೀಯ ಪ್ರಭಾವ ಹೆಚ್ಚಾಗಬಹುದು ಹಾಗೂ ಗಲಾಟೆಗಳ ಸಂಭವವೂ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಹೀಗಾಗಿ ಈ ವಿಷಯದ ಕುರಿತು ಇನ್ನಷ್ಟು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
ಒಟ್ಟಾರೆ ಮೊಬೈಲ್ ನಿರ್ಬಂಧ, ಡ್ರಗ್ಸ್ ಮುಕ್ತ ಕ್ಯಾಂಪಸ್ ಮತ್ತು ವಿದ್ಯಾರ್ಥಿ ಚುನಾವಣೆಗಳ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ.
