ಕೆ.ಆರ್.ಪೇಟೆ, ಮೇ 25: ತಾಯಿ ಮತ್ತು ಮಕ್ಕಳ ಆಕಾಲಿಕ ಮರಣ ಪ್ರಮಾಣ ಕಡಿಮೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶೇಷ ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ರಾಜ್ಯ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.
ಪಟ್ಟಣದ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ₹28 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆಗಳ ಅವಲಂಬನೆ ತಪ್ಪಿಸಲು ಸರ್ಕಾರವೇ ಹೈಟೆಕ್ ಆಸ್ಪತ್ರೆಗಳನ್ನು ನಿರ್ಮಿಸಿ ಉಚಿತ ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ ಎಂದರು.
ಆರೋಗ್ಯ ರಕ್ಷಾ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹಾಗೂ ಮಕ್ಕಳಿಗೆ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳು ಉಚಿತವಾಗಿ ದೊರೆಯಲಿವೆ ಎಂದು ತಿಳಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಶಾಸಕ ಹಾಗೂ ಸಚಿವ ನಾರಾಯಣಗೌಡ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಸಕ ಹೆಚ್.ಟಿ. ಮಂಜು ಅವರ ವಿಶೇಷ ಆಸಕ್ತಿಯಿಂದ ಸುಮಾರು ₹26 ಕೋಟಿ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸಿಬ್ಬಂದಿ ನೇಮಕ ಮಾಡಿ ಇದೀಗ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹೆಚ್.ಟಿ. ಮಂಜು, ಆಸ್ಪತ್ರೆಗೆ ಬರಬೇಕಾಗಿದ್ದ ಕೆಲವು ವೈದ್ಯಕೀಯ ಪರಿಕರಗಳು ಪಕ್ಕದ ಕೆ.ಆರ್.ನಗರ ಆಸ್ಪತ್ರೆಗೆ ವರ್ಗಾವಣೆ ಆಗಿದ್ದರಿಂದ ಆರೋಗ್ಯ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹೊಸ ಪರಿಕರಗಳನ್ನು ಒದಗಿಸುವಂತೆ ಮನವಿ ಮಾಡಿದ್ದೇನೆ ಎಂದರು.

ಈಗಾಗಲೇ ಬಹುತೇಕ ಎಲ್ಲಾ ಉಪಕರಣಗಳು ಆಸ್ಪತ್ರೆಗೆ ಬಂದಿದ್ದು, ಉಳಿದ ಕೆಲ ಪರಿಕರಗಳನ್ನೂ ಶೀಘ್ರದಲ್ಲಿ ಒದಗಿಸುವ ಭರವಸೆ ಸರ್ಕಾರ ನೀಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ. ನಾಗೇಂದ್ರಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ಸಿ. ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆಸ್ಪತ್ರೆ ನಿರ್ಮಾಣಕ್ಕಾಗಿ ಜಾಗ ದಾನ ಮಾಡಿದ ದುಂಡಶೆಟ್ಟಿ-ಲಕ್ಷ್ಮಮ್ಮ ಕುಟುಂಬದ ವೆಂಕಟಕೃಷ್ಣಶೆಟ್ಟಿಯನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಜಿತ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಡಾ. ಎಸ್.ಯು. ಅಶೋಕ್ ಸೇರಿದಂತೆ ಹಲವು ಗಣ್ಯರು ಹಾಗೂ ವೈದ್ಯರು ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.
