ಮೂಡಿಗೆರೆ: ಕ್ರೀಡೆಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಹೇಳುವ ಕ್ರೀಡಾ ಇಲಾಖೆ, ಕ್ರೀಡಾಪಟುಗಳಿಗೆ ಅಗತ್ಯವಿರುವ ಕ್ರೀಡಾಂಗಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಜೀದ್ ಬಣಕಲ್ ಆರೋಪಿಸಿದ್ದಾರೆ.
ಮೂಡಿಗೆರೆಯ ಹೊಯ್ಸಳ ಕ್ರೀಡಾಂಗಣದಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಕ್ರೀಡಾಪಟುಗಳು, ಕ್ರೀಡಾಕೂಟಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಹಾಗೂ ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜಕೀಯ ನಾಯಕರ ಬೃಹತ್ ಸಮಾವೇಶಗಳು ಹಾಗೂ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮಗಳು ಕ್ರೀಡಾಂಗಣದಲ್ಲಿ ನಡೆಯುವ ಸಂದರ್ಭದಲ್ಲಿ ಮಾತ್ರ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತದೆ. ಮಣ್ಣು ಸುರಿದು ಮೈದಾನವನ್ನು ಸಮತಟ್ಟು ಮಾಡುವಂತಹ ಕೆಲಸಗಳನ್ನು ನಡೆಸಲಾಗುತ್ತದೆಯಾದರೂ, ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಹಿಂದಿನ ಸ್ಥಿತಿಯೇ ಮುಂದುವರಿಯುತ್ತದೆ ಎಂದು ಅವರು ದೂರಿದ್ದಾರೆ.

ಕ್ರೀಡಾಭ್ಯಾಸಕ್ಕೆ ಆಗಮಿಸುವ ಆಟಗಾರರು ಮೈದಾನದ ಅವ್ಯವಸ್ಥೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮೂಡಿಗೆರೆ ತಾಲೂಕಿನಲ್ಲಿ ಹಲವು ಪ್ರತಿಭಾವಂತ ಕ್ರೀಡಾಪಟುಗಳಿದ್ದರೂ, ಅಗತ್ಯ ಸೌಲಭ್ಯಗಳ ಕೊರತೆಯಿಂದ ಕ್ರೀಡಾ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಸಾಜೀದ್ ಬಣಕಲ್ ಹೇಳಿದ್ದಾರೆ.

ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಸ್ಥಳ ಸೇರಿದಂತೆ ಹಲವು ಮೂಲಸೌಕರ್ಯಗಳ ಕೊರತೆಯಿದೆ. ಇದರಿಂದ ಕ್ರೀಡಾಪಟುಗಳ ಆರೋಗ್ಯ, ಸುರಕ್ಷತೆ ಹಾಗೂ ಅನುಕೂಲತೆಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹೊಯ್ಸಳ ಕ್ರೀಡಾಂಗಣವನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕ್ರೀಡಾಪಟುಗಳು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಲು ಅಗತ್ಯ ಮೂಲಸೌಕರ್ಯಗಳನ್ನು ಶೀಘ್ರ ಒದಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಾಜೀದ್ ಬಣಕಲ್ ಮನವಿ ಮಾಡಿದ್ದಾರೆ.

