ಚನ್ನರಾಯಪಟ್ಟಣ: ನಿವೃತ್ತ ಪ್ರಾಂಶುಪಾಲರಾದ ಎನ್ ತಮ್ಮಣ್ಣಗೌಡ ಹಾಗೂ ಪ್ರೊಫೆಸರ್ ನರಸಿಂಹೇಗೌಡ ಅವರು ರಚಿಸಿರುವ ಏಳು ಕೃತಿಗಳ ಲೋಕಾರ್ಪಣೆ ಸಮಾರಂಭವು ಪಟ್ಟಣದ ಬಿಜಿಎಸ್ ಸಭಾಂಗಣದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಹಯೋಗದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ನೆರವೇರಿಸಿ ಆಶೀರ್ವಚನ ನೀಡಿದರು. ಪೂಜ್ಯ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಶ್ರೀ ಶಂಭುನಾಥ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮಕ್ಕೆ ಧಾರ್ಮಿಕ ಕಳೆ ತಂದರು.

ಎನ್ ತಮ್ಮಣ್ಣಗೌಡ ಹಾಗೂ ನಾರಣಾಪುರ ನರಸಿಂಹೇಗೌಡರು ರಚಿಸಿರುವ ಸಪ್ತ ಕೃತಿಗಳನ್ನು ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು. ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಮೌಲ್ಯಗಳನ್ನು ಒಳಗೊಂಡ ಈ ಕೃತಿಗಳು ಸಮಾಜಕ್ಕೆ ಮಾರ್ಗದರ್ಶಕವಾಗಲಿವೆ ಎಂದು ವಕ್ತಾರರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ, ಗಾಂಧಿ ಸ್ಮಾರಕ ಭವನದ ಕಾರ್ಯದರ್ಶಿ ಜೆ.ಬಿ. ಶಿವರಾಜು, ಆಂಧ್ರಪ್ರದೇಶದ ತೆರಿಗೆ ಆಯುಕ್ತ ಜಯರಾಮ್ ರಾಯಪುರ, ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಎಂ.ಕೆ. ಮಂಜುನಾಥ್, ಸಿ.ಸಿ. ಕುಮಾರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಇದೇ ವೇಳೆ ವಿಶ್ರಾಂತ ಪ್ರಾಧ್ಯಾಪಕರಾದ ತಮ್ಮಣ್ಣಗೌಡ ಹಾಗೂ ನರಸಿಂಹೇಗೌಡರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಗಣ್ಯರು ಶ್ಲಾಘಿಸಿದರು.
– ಮಂಜುನಾಥ್ ಐ.ಕೆ
