ರಾಮನಾಥಪುರ: ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೊಣನೂರಿನಲ್ಲಿ ನಿರ್ಮಿಸಲಾಗಿರುವ ಬಿಸಿಎಂ ಇಲಾಖೆಯ ನೂತನ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಾಸಕ ಎ. ಮಂಜು, ದೂರದ ಗ್ರಾಮಗಳಿಂದ ಕೊಣನೂರಿಗೆ ಬಂದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರೆಯುವುದರಿಂದ ಅವರ ಶಿಕ್ಷಣ ಮುಂದುವರಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಿಸಿಎಂ ಇಲಾಖೆಯ ಈ ಸೌಲಭ್ಯ ಮಹತ್ವದ್ದಾಗಿದೆ. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಯಾವುದೇ ಆರ್ಥಿಕ ಅಥವಾ ವಸತಿ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ನೂತನ ವಿದ್ಯಾರ್ಥಿನಿಲಯದಿಂದ ಕೊಣನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಉತ್ತಮ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
