ಬೆಂಗಳೂರು/ದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ, ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಸುಮಾರು ಆರು ಗಂಟೆಗಳ ಕಾಲ ನಡೆದ ಮ್ಯಾರಾಥಾನ್ ಸಭೆಯಲ್ಲಿ ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಅವಕಾಶ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರಲು ಸೂಚನೆ ನೀಡಿರುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ, ಸಭೆಯಲ್ಲಿ ರಾಹುಲ್ ಗಾಂಧಿ ನೀಡಿದ ಈ ಪ್ರಸ್ತಾವನೆಗೆ ಸಿದ್ದರಾಮಯ್ಯ ತಕ್ಷಣ ಯಾವುದೇ ಸ್ಪಷ್ಟ ಸಮ್ಮತಿ ಸೂಚಿಸಿಲ್ಲ ಎನ್ನಲಾಗಿದೆ. ಸಭೆಯ ನಂತರ ಅವರು ನೇರವಾಗಿ ಜಾರ್ಜ್ ನಿವಾಸಕ್ಕೆ ತೆರಳಿ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳು, ನಾಯಕತ್ವ ಬದಲಾವಣೆ ಸಾಧ್ಯತೆ ಹಾಗೂ ಮುಂದಿನ ರಾಜಕೀಯ ನಡೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಸಿದ್ದರಾಮಯ್ಯ ಮನಸ್ಸು ಮಾಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿವೆ. ಆದರೆ ಆಪ್ತ ಸಚಿವರು ಮತ್ತು ಬೆಂಬಲಿಗರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. “ನಿಮ್ಮ ಪರವಾಗಿ ನಾವು ರಾಹುಲ್ ಗಾಂಧಿಯವರೊಂದಿಗೆ ಮಾತನಾಡುತ್ತೇವೆ” ಎಂದು ಆಪ್ತರು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನಾನು ರಾಹುಲ್ ಗಾಂಧಿಯವರ ಮಾತನ್ನು ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ನೀಡುತ್ತೇನೆ, ನೀವು ಬೇಕಾದರೆ ಹೋಗಿ ಮಾತಾಡಿ” ಎಂದು ಹೇಳಿದ್ದಾರೆ ಎನ್ನುವ ಮಾಹಿತಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಆದರೆ ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ. ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಕೆಲವು ದಿನಗಳು ಕಾಂಗ್ರೆಸ್ ರಾಜಕೀಯದ ದೃಷ್ಟಿಯಿಂದ ಮಹತ್ವ ಪಡೆದಿವೆ.