ಕೆರೆ-ಕಟ್ಟೆಗಳ ಅಭಿವೃದ್ಧಿ, ನಾಲೆಗಳ ಅಭಿವೃದ್ಧಿ, ರಸ್ತೆ ಹಾಗೂ ಚರಂಡಿ ನಿರ್ಮಾಣ, ತೋಟಗಾರಿಕೆ ಮತ್ತು ಕೃಷಿ ಆಧಾರಿತ ಕಾಮಗಾರಿಗಳು, ಜಾನುವಾರು ಕೊಟ್ಟಿಗೆ, ಸಸಿ ನೆಡುವಿಕೆ, ಅಂಗನವಾಡಿ ಕಟ್ಟಡ, ಶಾಲಾ ಶೌಚಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ‘ನಮ್ಮ ಗ್ರಾಮ, ನಮ್ಮ ಅಭಿವೃದ್ಧಿ, ನಮ್ಮ ಭವಿಷ್ಯ’ ಯೋಜನೆಯಡಿ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ತಾಲ್ಲೂಕು ಯೋಜನಾಧಿಕಾರಿ ಧರ್ಮೇಂದ್ರ ತಿಳಿಸಿದರು.
ರಾಮನಾಥಪುರ ಗ್ರಾಮ ಪಂಚಾಯಿತಿ ಆವರಣದಿಂದ ಶ್ರೀ ಬಸವೇಶ್ವರ ವೃತ್ತ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ನಡೆದ ಗ್ರಾಮಗಳ ಸಮಗ್ರ ಸಬಲೀಕರಣದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಯೋಜನೆಯಡಿ ಗ್ರಾಮಗಳ ಸಮಗ್ರ ಅಭಿವೃದ್ಧಿ ಹಾಗೂ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

ಒಂದು ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತ್ರಿ ಕೆಲಸದ ಅವಕಾಶವಿದ್ದು, ಕೂಲಿ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ಒದಗಿಸಲಾಗುತ್ತದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಜನರು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಧರ್ಮೇಂದ್ರ ಮನವಿ ಮಾಡಿದರು.
ಗ್ರಾಮಗಳ ಅಭಿವೃದ್ಧಿಯೊಂದಿಗೆ ಕುಟುಂಬಗಳ ಆರ್ಥಿಕ ಸ್ಥಿರತೆ ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಗ್ರಾಮಸ್ಥರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಕಾಮಗಾರಿಗಳನ್ನು ಯೋಜನೆಯಡಿ ಪಡೆದುಕೊಳ್ಳಲು ಮುಂದಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಪ್ರದೀಪ್, ಹರೀಶ್, ಅಭಿವೃದ್ಧಿ ಅಧಿಕಾರಿ ಎಂ.ಎನ್. ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಕುಮಾರಸ್ವಾಮಿ ಎಂ.ಎನ್.
