ಮೂಡಿಗೆರೆ: ಶಾಲಾ ಶಿಕ್ಷಣ ಇಲಾಖೆ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ವತಿಯಿಂದ ನವೆಂಬರ್ 21ರಂದು ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಕಿರಿಯ ಹಾಗೂ ಹಿರಿಯ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2026 ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಮೂಡಿಗೆರೆಯ ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಮೊಹಮ್ಮದ್ ಇಮ್ರಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಲೆಯ ಅಧ್ಯಕ್ಷರಾದ ಎ.ಸಿ. ಆಸೀಫ್ ಇಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಮೂಡಿಗೆರೆ ತಾಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕ ಹೇಮಂತ್ ಚಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಶಿವಕುಮಾರ್ ಡಿ., ಸಮೂಹ ಸಂಪನ್ಮೂಲ ವ್ಯಕ್ತಿ ಸುನಿಲ್ ಟಿ.ಎಲ್., ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜಪ್ಪ ಎಚ್., ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಫೈರೋಜ್ ಅಹಮ್ಮದ್, ಶಿಕ್ಷಕರ ಸಂಘದ ಕಾರ್ಯದರ್ಶಿ ಗಂಗಾಧರಪ್ಪ ಜಿ.ಎಲ್., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಲವೀನ ಲೋಬೊ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ವಲಯ-2 ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2026-27ರ ವಿವಿಧ ಸ್ಪರ್ಧೆಗಳಲ್ಲಿ ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆ, ಸೃಜನಶೀಲತೆ, ಕಲಾ ಕೌಶಲ್ಯ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಯಶಸ್ಸಿನ ಹಿಂದೆ ಶಾಲೆಯ ಸಂಚಾಲಕರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನ ಮತ್ತು ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಆಡಳಿತ ನಿರ್ದೇಶಕ ಮೊಹಮ್ಮದ್ ಇಮ್ರಾನ್, ಮುಖ್ಯೋಪಾಧ್ಯಾಯರು ಹಾಗೂ ಸಮಸ್ತ ಶಿಕ್ಷಕ ವೃಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯೇ ನಮ್ಮ ಶಾಲೆಯ ಹೆಮ್ಮೆ, ಅವರ ಯಶಸ್ಸೇ ನಮ್ಮ ಸಂತೋಷ ಎಂಬ ಆಶಯದೊಂದಿಗೆ ಶಾಲಾ ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದೆ.
