ಕೊರಟಗೆರೆ: ತಾಲ್ಲೂಕಿನ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ನವೆಂಬರ್ 21ರ ಶನಿವಾರ ಕೊರಟಗೆರೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕಂದಾಯ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗುವುದು. ಅಲ್ಲದೆ, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಸರ್ಕಾರದ ಜನಪರ ಯೋಜನೆಗಳು ಹಾಗೂ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ನವೆಂಬರ್ 20ರಂದು ಬೆಳಿಗ್ಗೆ 10 ಗಂಟೆಗೆ ಕೊರಟಗೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಹಾಗೂ ಮಾಧ್ಯಮ ಪ್ರತಿನಿಧಿಗಳ ಸಭೆ ಕರೆಯಲಾಗಿತ್ತು. ತುಮಕೂರಿನ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಹಾಗೂ ಕೊರಟಗೆರೆ ತಾಲ್ಲೂಕು ದಂಡಾಧಿಕಾರಿ ಶರತ್ ಕುಮಾರ್ ಡಿ.ಪಿ. ಅವರು ಸಭೆಯಲ್ಲಿ ಕಾರ್ಯಕ್ರಮದ ವಿವರಗಳನ್ನು ತಿಳಿಸಿದರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ: ನರಸಿಂಹಯ್ಯ ಹೊಸಕೋಟೆ
