ಕೊರಟಗೆರೆ:- ತಾಲೂಕಿನ ಪ್ರಜಾವಾಣಿ ವರದಿಗಾರ ಎಂ.ಆರ್. ಚಿದಂಬರ ಅವರಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ ಲಭಿಸಿದೆ.
ಸುಮಾರು ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಹಾಗೂ ಕನ್ನಡ–ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ಪ್ರಧಾನಿಸುತ್ತಿದೆ.
ಈ ಬಾರಿಯ ಪ್ರಶಸ್ತಿಗೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಪ್ರಾಯೋಜಕತ್ವದಲ್ಲಿ ಆಯ್ಕೆ ಸಮಿತಿಯು ಎಂ.ಆರ್. ಚಿದಂಬರ ಅವರನ್ನು ಆಯ್ಕೆ ಮಾಡಿದೆ.
ಪ್ರಶಸ್ತಿಯು ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮೇ 16, 2026 ರಂದು ಕಾಸರಗೋಡು ಜಿಲ್ಲೆಯ ಸುಬ್ಬಯ್ಯಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಯು.ಡಬ್ಲ್ಯೂ.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದು, ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವ ಎನ್.ಎಸ್. ಗೋಸರಾಜ್, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಎ.ಆರ್. ಚಿದಂಬರರಿಗೆ ದತ್ತಿನಿಧಿ ಪ್ರಶಸ್ತಿ ಲಭಿಸಿರುವುದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಕೊರಟಗೆರೆ ತಾಲೂಕು ಘಟಕದ ಪತ್ರಕರ್ತರಿಗೆ ಹೆಮ್ಮೆಯ ವಿಷಯವಾಗಿದ್ದು, ದತ್ತಿ ಪ್ರಶಸ್ತಿ ಪ್ರಕಟಿಸಿದ ನಂತರ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.
– ಶ್ರೀನಿವಾಸ್ ಕೊರಟಗೆರೆ.
