ನವದೆಹಲಿ : ರೈಲ್ವೆ ಇಲಾಖೆಯಿಂದ ಏ.28,29 ಮತ್ತು 30 , ರಂದು ನಡೆಯುತ್ತಿರುವ ನೇಮಕಾತಿ ಪರೀಕ್ಷೆಯಲ್ಲಿ, ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಬಿ. ಸೋಮಣ್ಣ ತಿಳಿಸಿದ್ದಾರೆ.
ಜನಿವಾರ ಮತ್ತು ಮಾಂಗಲ್ಯ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ನಿಬಂಧನೆಯ ಬಗ್ಗೆ ಪ್ರತಿಭಟನೆಗಳು ವ್ಯಕ್ತವಾಗಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಈ ವಿಷಯದಲ್ಲಿ ಚಿಂತನೆ ವ್ಯಕ್ತಪಡಿಸಿದ್ದವು. ಕೆಲವು ಸಂಸದರು ಮತ್ತು ಶಾಸಕರು ಕೂಡಾ ಈ ನಿಯಮವನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರದ ಗಮನಸೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ,
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಸಚಿವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಈ ಗೊಂದಲ ನಿವಾರಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಸಂಸ್ಕೃತಿಯನ್ನು ಬಿಂಬಿಸುವ ಜನಿವಾರ, ಮಾಂಗಲ್ಯ ಮುಂತಾದ ವಸ್ತುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಅಧಿಕಾರಿಗಳಿಗೆ ಸ್ಪಷ್ಟವಾಗಿ ಆದೇಶಿಸಿದ್ದು, ಇನ್ನು ಅಭ್ಯರ್ಥಿಗಳು ಇತರ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ಬರೆಯುವಂತೆ ಮನವಿ ಮಾಡಲಾಗಿದೆ. ಯಾವುದೇ ಗೊಂದಲ ಉಂಟಾಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
