ರಾಮನಗರ, ಆಗಸ್ಟ್ 15: ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಂದಿನಿಂದ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನದ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ ಜಾರಿಯಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ಪ್ರತ್ಯೇಕವಾಗಿ ತೀರ್ಮಾನಿಸಲಿವೆ ಎಂದು ಸ್ಪಷ್ಟಪಡಿಸಿದರು.
ಪರಿಸರ ಸ್ವಚ್ಛತೆ ಹಾಗೂ ದೇವಾಲಯಗಳ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಯು ಪತ್ತೆಯಾದಲ್ಲಿ, ಸಂಬಂಧಿಸಿದವರಿಗೆ ದಂಡ ವಿಧಿಸಲು ದೇಗುಲಗಳ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.
ಇದೇ ವಿಷಯವನ್ನು ಗುರುವಾರ ವಿಧಾನಪರಿಷತ್ ಕಲಾಪದಲ್ಲಿಯೂ ಸಚಿವರು ಪ್ರಸ್ತಾಪಿಸಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ತಕ್ಷಣದಿಂದಲೇ ಜಾರಿಯಲ್ಲಿರುತ್ತದೆ ಎಂದು ಘೋಷಿಸಿದ್ದರು.
