ರಾಮನಾಥಪುರ, ನ.13: ಇಲ್ಲಿನ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಎ. ಮಂಜು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಸೇತುವೆಯ ಗುಣಮಟ್ಟ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಸೇತುವೆಯನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು.

ಸೇತುವೆ ಬಳಕೆಗೆ ಬಂದರೆ ರಾಮನಾಥಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಲಿದೆ. ಶೀಘ್ರದಲ್ಲೇ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.
ಈ ಸಂದರ್ಭದಲ್ಲಿ ಕೆಆರ್ಡಿಸಿಎಲ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
