ರಾಮನಾಥಪುರ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಕನ್ನಡ ಮಾಧ್ಯಮ ಮೀಸಲಾತಿಯನ್ನು ಶೇ.5ರಿಂದ ಶೇ.15ಕ್ಕೆ ಹೆಚ್ಚಿಸಬೇಕು ಎಂದು ಮಾಜಿ ಸಚಿವ ಹಾಗೂ ಅರಕಲಗೂಡು ಶಾಸಕ ಎ. ಮಂಜು ಒತ್ತಾಯಿಸಿದ್ದಾರೆ.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಮಕ್ಕಳ ಮನೆ ಶಾಲೆಯ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪಕ್ಷಾತೀತವಾಗಿ ಪ್ರಸ್ತಾಪಿಸಿ ಕನ್ನಡ ಭಾಷೆ, ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು.
ಅರಕಲಗೂಡು ಕ್ಷೇತ್ರದ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಕ್ಕಳ ಮನೆ ಪ್ರಿ-ಸ್ಕೂಲ್ಗಳನ್ನು ಆರಂಭಿಸಿ, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಪೂರ್ವಪ್ರಾಥಮಿಕ ಶಿಕ್ಷಣ ಒದಗಿಸುವ ಗುರಿ ಹೊಂದಿರುವುದಾಗಿ ಎ. ಮಂಜು ತಿಳಿಸಿದರು.
– ಕುಮಾರಸ್ವಾಮಿ ಎಂ.ಎನ್.
