ರಾಮನಾಥಪುರ: ದೀಪಾವಳಿ ಹಬ್ಬದ ಪ್ರಯುಕ್ತ ತಂಬಾಕು ಮಂಡಳಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾವೇರಿ ನದಿ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಿದರು.
ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿ ತಂಬಾಕು ಮಂಡಳಿ ಅಧೀಕ್ಷಕ ಎಚ್.ವಿ. ವಿಜಯಕುಮಾರ್ ಅವರ ನೇತೃತ್ವದಲ್ಲಿ ತಂಬಾಕು ಹರಾಜು ಮಾರುಕಟ್ಟೆ ಹಾಗೂ ಮಂಡಳಿ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ನದಿ ದಂಡೆಯಲ್ಲಿ ಸಾರ್ವಜನಿಕರು ಎಸೆದಿದ್ದ ನೂರಾರು ಪ್ಲಾಸ್ಟಿಕ್ ವಸ್ತುಗಳು, ಬಟ್ಟೆಗಳು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು.
ನಂತರ ಮಾತನಾಡಿದ ತಂಬಾಕು ಮಂಡಳಿ ಅಧೀಕ್ಷಕ ಎಚ್.ವಿ. ವಿಜಯಕುಮಾರ್, ಕಾವೇರಿ ನದಿಯ ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸಹಕರಿಸಬೇಕು. ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಬಟ್ಟೆ ಚೀಲ ಹಾಗೂ ಪರಿಸರ ಸ್ನೇಹಿ ಚೀಲಗಳನ್ನು ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚುವುದಲ್ಲದೆ, ಪಟ್ಟಣದ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ನದಿ ನೀರಿನ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಕಂಡುಬಂದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ತಂಬಾಕು ಮಂಡಳಿ ಅಧಿಕಾರಿಗಳಾದ ನವೀನ್, ಸುನೀಲ್, ಪುಟ್ಟರಾಜು ಸೇರಿದಂತೆ ಮಂಡಳಿಯ ಸಿಬ್ಬಂದಿ ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
