ರಾಮನಾಥಪುರ, ಅ. 14: ಇಲ್ಲಿನ ಕಾವೇರಿ ನದಿ ಸೇತುವೆಯ ಬಾಕಿ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಅವರು ಕೆ.ಆರ್.ಡಿ.ಸಿ.ಎಲ್. ಅಧಿಕಾರಿಗಳಿಗೆ ಗಡುವು ನೀಡಿದರು.
ಬುಧವಾರ ರಾಮನಾಥಪುರದ ಕಾವೇರಿ ನದಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದ್ದರೂ ನಿರ್ಲಕ್ಷ್ಯ ವಹಿಸುತ್ತಿರುವುದೇಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಹಾಸನ–ಅರಕಲಗೂಡು–ರಾಮನಾಥಪುರ ಮಾರ್ಗವಾಗಿ ಬೆಟ್ಟದಪುರ, ಪಿರಿಯಾಪಟ್ಟಣ ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ಕಾಮಗಾರಿ ಸುಮಾರು 10 ವರ್ಷಗಳ ಹಿಂದೆ ಆರಂಭವಾಗಿದೆ. ಇಷ್ಟು ವರ್ಷಗಳಾದರೂ ಕಾಮಗಾರಿ ಪೂರ್ಣಗೊಳ್ಳದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು.
ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಸೇತುವೆಯನ್ನು ಲೋಕಾರ್ಪಣೆಗೆ ಸಿದ್ಧಪಡಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸದಿದ್ದರೆ ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತರ ಜಮೀನು ಸಮಸ್ಯೆಯಿಂದ ಕಾಮಗಾರಿ ವಿಳಂಬ: ಕೆ.ಆರ್.ಡಿ.ಸಿ.ಎಲ್.
ಈ ವೇಳೆ ಪ್ರತಿಕ್ರಿಯಿಸಿದ ಕೆ.ಆರ್.ಡಿ.ಸಿ.ಎಲ್. ಎಂಜಿನಿಯರ್ ಶಿವರಾಜ್ ಹಾಗೂ ಅಧಿಕಾರಿಗಳು, ಸೇತುವೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕೆಲವು ರೈತರು ತಮ್ಮ ಮನೆ ಮತ್ತು ಜಮೀನಿನ ಭಾಗವನ್ನು ಬಿಟ್ಟುಕೊಡಬೇಕಿರುವುದರಿಂದ ಕಾಮಗಾರಿ ಬಾಕಿ ಉಳಿದಿದೆ. ಅಗತ್ಯ ಜಾಗ ಲಭ್ಯವಾದ ತಕ್ಷಣ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಬಸವೇಶ್ವರ ವೃತ್ತದಲ್ಲಿ ರಸ್ತೆ ಉಬ್ಬು ನಿರ್ಮಿಸಲು ಮನವಿ
ಇದೇ ಸಂದರ್ಭದಲ್ಲಿ ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿ ಮತ್ತೆ ರಸ್ತೆ ಉಬ್ಬುಗಳನ್ನು (ಹಂಪ್ಸ್) ನಿರ್ಮಿಸುವಂತೆ ಸಾರ್ವಜನಿಕರು ಶಾಸಕ ಎ. ಮಂಜು ಅವರಿಗೆ ಮನವಿ ಸಲ್ಲಿಸಿದರು.
ಈ ವೃತ್ತದ ನಾಲ್ಕು ರಸ್ತೆಗಳಲ್ಲಿ ಹಿಂದೆ ಅಗತ್ಯ ಸ್ಥಳಗಳಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿತ್ತು. ಆದರೆ ರಸ್ತೆ ಅಗಲೀಕರಣ ಹಾಗೂ ಮರು ಡಾಂಬರೀಕರಣದ ಸಂದರ್ಭದಲ್ಲಿ ಅವುಗಳನ್ನು ಮರುನಿರ್ಮಿಸದ ಕಾರಣ, ಇಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದರು.
ಬಸವೇಶ್ವರ ವೃತ್ತದ ಪಕ್ಕದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣವಿದ್ದು, ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯೂ ಇದೆ. ಹೀಗಾಗಿ ಈ ಪ್ರದೇಶದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.
ಹಾಸನ, ಮಡಿಕೇರಿ, ಬಿಳಗೂಲಿ ಹಾಗೂ ಪಿರಿಯಾಪಟ್ಟಣದ ಕಡೆಗೆ ತೆರಳುವ ನಾಲ್ಕು ರಸ್ತೆಗಳಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಅಪಘಾತಗಳನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಶಾಸಕರನ್ನು ಕೋರಿದರು.
– ಕುಮಾರಸ್ವಾಮಿ ಎಂ.ಎನ್.
