ರಾಮನಾಥಪುರ, ಅ. 24: ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗವು ಶೈಕ್ಷಣಿಕ, ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದು ಶಾಸಕ ಎ. ಮಂಜು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿರುವ ‘ಮಕ್ಕಳ ಮನೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಮ್ಮ ಪತ್ನಿ ತಾರಾ ಮಂಜು ಅವರ ಕಲ್ಪನೆಯಂತೆ ಹನ್ಯಾಳು ಶಾಲೆಯಲ್ಲಿ ಆರಂಭವಾದ ‘ಮಕ್ಕಳ ಮನೆ’ ಪೂರ್ವ ಪ್ರಾಥಮಿಕ ಶಿಕ್ಷಣ ಯೋಜನೆಯು ಇಂದು ಅರಕಲಗೂಡು ಕ್ಷೇತ್ರದ 21 ಸರ್ಕಾರಿ ಶಾಲೆಗಳಿಗೆ ವಿಸ್ತರಿಸಿರುವುದು ಸಂತಸದ ಸಂಗತಿ. ಈ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಉತ್ತಮವಾಗಿ ನಡೆಯುತ್ತಿದ್ದು, ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿವೆ. ಇದಕ್ಕಾಗಿ ಹಿರಿಯ ವಿದ್ಯಾರ್ಥಿಗಳ ಬಳಗಕ್ಕೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಹನ್ಯಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ದಿವಂಗತ ಎಚ್.ಎನ್. ನಂಜೇಗೌಡರ ಸ್ಮರಣಾರ್ಥ ಸುಮಾರು ₹2 ಲಕ್ಷ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ಸುಮಾರು 2,000 ರೋಗಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಎಸ್ಎಸ್ಎಲ್ಸಿ ನಂತರ ಮುಂದೇನು ಎಂಬ ಕುರಿತು ಅರಕಲಗೂಡು ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಮಾರ್ಗದರ್ಶನ ಕಾರ್ಯಾಗಾರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಗಣಿತ ಮತ್ತು ವಿಜ್ಞಾನ ರಸಪ್ರಶ್ನೆ ಸ್ಪರ್ಧೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಹಾಗೂ ಇತರ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಎಂಆರ್ಪಿಎಲ್ ಮಂಗಳೂರು ಸಂಸ್ಥೆಯ ನೆರವಿನಿಂದ ಸುಮಾರು ₹14 ಲಕ್ಷ ವೆಚ್ಚದಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಕೊಠಡಿಗಳನ್ನು ನಿರ್ಮಿಸಲಾಗಿದೆ. ಐಟಿಸಿ ಸಂಸ್ಥೆಯ ಸಹಕಾರದಿಂದ ಹೈಟೆಕ್ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದರು.
ಇದರ ಜತೆಗೆ ರೈತರೊಂದಿಗೆ ಸಂವಾದ, ರೈತರ ಯಶೋಗಾಥೆಗಳ ಹಂಚಿಕೆ, ಶಾಲಾ ವಾರ್ಷಿಕೋತ್ಸವ, ಗುರುವಂದನೆ, ರಕ್ತದಾನ ಶಿಬಿರ, ತಾಲ್ಲೂಕು ಮಟ್ಟದ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಗೆ ಹಿರಿಯ ವಿದ್ಯಾರ್ಥಿಗಳ ಬಳಗ ನಿರಂತರವಾಗಿ ಸಹಕಾರ ನೀಡುತ್ತಿದೆ. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಬಳಗವು ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಎ. ಮಂಜು ಆಶಿಸಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಲರಾಮ್, ಜಿಲ್ಲಾ ಲೆಕ್ಕಪತ್ರ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ. ಅಶೋಕ್ ಹನ್ಯಾಳ್, ಜಿಲ್ಲಾ ಡಯಟ್ ಪ್ರಾಂಶುಪಾಲ ರುದ್ರೇಶ್, ಅರಕಲಗೂಡು ತಹಶೀಲ್ದಾರ್ ಸೌಮ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ದಿಲೀಪ್, ಹನ್ಯಾಳು ಗ್ರಾಮ ಪಂಚಾಯಿತಿ ಪಿಡಿಒ ಸುಷ್ಮಾ, ಲಕ್ಕೂರು ಪಿಡಿಒ ಮೋಹನ್, ರಾಮನಾಥಪುರ ಪಿಡಿಒ ಕುಮಾರಸ್ವಾಮಿ, ಪ್ರೌಢಶಾಲಾ ಸಂಘದ ಅಧ್ಯಕ್ಷ ಮಧುಕರ್ ಜಿ.ಟಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್ ಎಚ್.ಪಿ., ನಿವೃತ್ತ ಶಿಕ್ಷಕರಾದ ಮಲ್ಲೇಶ್ ಮತ್ತು ಕಾಳಾಬೋಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ರಾಮನಾಥಪುರ
