ರಾಮನಾಥಪುರ: ಹೋಬಳಿಯ ಕಾಳೇನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿಗೆ ಶಾಸಕ ಎ. ಮಂಜು ಅವರು ಗೌರಿ ಗಣೇಶ ಹಬ್ಬದ ಶುಭದಿನದಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಉಪಕೇಂದ್ರದ ಮೂಲಕ ಕಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿವೆ.

ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಶಾಸಕ ಎ. ಮಂಜು, ನಿರ್ಮಾಣದ ವೇಳೆ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
