ರಾಮನಾಥಪುರ: ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೈಗೆತ್ತಿಕೊಳ್ಳುವ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಎ. ಮಂಜು ಹೇಳಿದರು.
ಕ್ಷೇತ್ರದ ಕಸಬಾ ಹೋಬಳಿಯ ನರಸಿನಕುಪ್ಪೆ ಹಾಗೂ ಕಂಚೇನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನರಸಿನಕುಪ್ಪೆ ಗ್ರಾಮದಲ್ಲಿ ₹15 ಲಕ್ಷ ಹಾಗೂ ಕಂಚೇನಹಳ್ಳಿ ಗ್ರಾಮದಲ್ಲಿ ₹35 ಲಕ್ಷ ವೆಚ್ಚದಲ್ಲಿ ಒಟ್ಟು ₹50 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಮಾನದಂಡಗಳಂತೆ ಹಾಗೂ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಂಚೇನಹಳ್ಳಿ ಗ್ರಾಮದ ದೇವಸ್ಥಾನದ ಪುನರ್ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಶಾಸಕ ಎ. ಮಂಜು ಅವರು ದೇವಸ್ಥಾನದ ಪುನರ್ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನರಸೇಗೌಡ, ಮುಖಂಡರಾದ ದಿವಾಕರ್, ಗ್ರಾಮದ ಹಿರಿಯ ಮುಖಂಡರು, ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
