ರಾಮನಾಥಪುರ, ಜು. 25: ಶಿಕ್ಷಣವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳು, ಪ್ರಕೃತಿ ಪ್ರೇಮ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಂತಿರಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಹೇಳಿದರು.
ಕೊಣನೂರು ಹೋಬಳಿಯ ಸಿದ್ದಾಪುರ ಗೇಟ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗಳು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದ್ದು, ಇದು ಶೈಕ್ಷಣಿಕ ಕ್ರಾಂತಿಗೆ ಬುನಾದಿ ಹಾಕುತ್ತಿದೆ. ಇಂತಹ ಶಿಕ್ಷಣ ವ್ಯವಸ್ಥೆಗೆ ಪೋಷಕರು ಹಾಗೂ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ದೇಶದ ಪ್ರಧಾನಮಂತ್ರಿಯಾಗಿರುವುದು ಎಲ್ಲ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳು ಸರ್ಕಾರಿ ಶಾಲೆ-ಕಾಲೇಜುಗಳಿಗೆ ಸೇರುವ ಮೂಲಕ ಅವುಗಳನ್ನು ಉಳಿಸಿ, ಉತ್ತಮ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
