ರಾಮನಾಥಪುರ, ಆ.6: ವಿದ್ಯಾರ್ಥಿಗಳು ಕ್ರೀಡೆಯೊಂದಿಗೆ ಉನ್ನತ ಶಿಕ್ಷಣಕ್ಕೂ ಸಮಾನ ಮಹತ್ವ ನೀಡಿ, ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಕರೆ ನೀಡಿದರು.
ಹಳ್ಳಿಮೈಸೂರು ಹೋಬಳಿಯ ಕೆರಗೋಡು ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಹದಿಹರೆಯದಲ್ಲಿ ವಿವಿಧ ರೀತಿಯ ಆಕರ್ಷಣೆಗಳಿಗೆ ಒಳಗಾಗದೆ ತಮ್ಮ ಗುರಿಯತ್ತ ಗಮನಹರಿಸಬೇಕು. ನಿರಂತರ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಿ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು ಎಂದು ಸಲಹೆ ನೀಡಿದರು.

“ಸಮಾಜದ ಭದ್ರ ಬುನಾದಿ ಶಿಕ್ಷಣದಿಂದ ಮಾತ್ರ ಸಾಧ್ಯ. ದೇಶದ ಅಭಿವೃದ್ಧಿಗೆ ಶಿಕ್ಷಣವೇ ಮೂಲ ಶಕ್ತಿ. ಶಿಕ್ಷಣವು ಪ್ರತಿಯೊಬ್ಬರ ಹಕ್ಕಾಗಿದ್ದು, ಎಲ್ಲ ವಿದ್ಯಾರ್ಥಿಗಳೂ ಉನ್ನತ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು,” ಎಂದು ಎ. ಮಂಜು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
