ರಾಮನಾಥಪುರ: ವಿದ್ಯಾರ್ಥಿಗಳಿಗೆ ಕ್ರೀಡೆಯೇ ಆರೋಗ್ಯ, ಕ್ರೀಡೆಯೇ ಶಕ್ತಿ ಹಾಗೂ ಕ್ರೀಡೆಯೇ ಆತ್ಮವಿಶ್ವಾಸ ಎಂದು ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ತಿಳಿಸಿದರು.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಪ್ರೌಢಶಾಲೆಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಕ್ರೀಡಾ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುವುದರ ಜೊತೆಗೆ ಜೀವನದಲ್ಲಿ ಸವಾಲುಗಳನ್ನು ಎದುರಿಸುವ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ತಾಲೂಕು ಮಟ್ಟದ ಈ ಕ್ರೀಡಾಕೂಟವು ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿ ಎಂದು ಶ್ರೀಗಳು ಹಾರೈಸಿದರು.

ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಹನ್ಯಾಳು ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್, ಪೋಷಕರು, ಕ್ರೀಡಾಪಟುಗಳು, ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ
