ರಾಮನಾಥಪುರ: ಹಳ್ಳಿಮೈಸೂರು ಹೋಬಳಿಯ ರೈತರು ಹಾಗೂ ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಹೋಬಳಿ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆ-ಕಟ್ಟೆಗಳಿಗೂ ಸಾಧ್ಯವಾದಷ್ಟು ಬೇಗ ನೀರು ಹರಿಸಿ ತುಂಬಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ತಿಳಿಸಿದರು.
ಹಳ್ಳಿಮೈಸೂರು ಹೋಬಳಿಯ ಹಾಡ್ಯ ಗ್ರಾಮದ ಕೆರೆ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ ಶಾಸಕ ಎ. ಮಂಜು ಅವರು ಕೆರೆಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೋಬಳಿಯ ಕೆರೆಗಳು ತುಂಬುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ರೈತರು ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಏತ ನೀರಾವರಿ ಕಾಮಗಾರಿ ಪರಿಶೀಲನೆ
ಇದೇ ವೇಳೆ ಮಲ್ಲಿಪಟ್ಟಣ–ಕಟ್ಟೆಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಶಾಸಕ ಎ. ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿದ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಕಳೆದ ವಾರ ತಮ್ಮ ಅಧ್ಯಕ್ಷತೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿತ್ತು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವರ್ಷ ಮಳೆಯ ಪ್ರಮಾಣವೂ ಕುಂಠಿತವಾಗಿದ್ದು, ಏತ ನೀರಾವರಿ ಯೋಜನೆ ಈಗಾಗಲೇ ಪೂರ್ಣಗೊಂಡಿದ್ದರೆ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಸಾಧ್ಯವಾಗುತ್ತಿತ್ತು. ಕಾಮಗಾರಿ ವಿಳಂಬವಾಗುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗುತ್ತಿಗೆದಾರರು, ಸ್ಥಳೀಯ ಮುಖಂಡರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
