ರಾಮನಾಥಪುರ: ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೆಸವತ್ತೂರು ಮಾರ್ಗದಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಅರಕಲಗೂಡು ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎ. ಮಂಜು ಅವರಿಗೆ ಮನವಿ ಸಲ್ಲಿಸಿದರು.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದಲ್ಲಿರುವ ಶಾಸಕ ಎ. ಮಂಜು ಅವರ ನಿವಾಸಕ್ಕೆ ಭೇಟಿ ನೀಡಿದ ಕೆಸವತ್ತೂರು ಗ್ರಾಮದ ಅಧ್ಯಕ್ಷರು, ಅಕ್ಕನ ಬಳಗದ ಸದಸ್ಯರು ಹಾಗೂ ಗ್ರಾಮಸ್ಥರು ಮನವಿ ಸಲ್ಲಿಸಿ, ಹಲವು ವರ್ಷಗಳಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.
ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ರಾಮನಾಥಪುರ–ಕೊಣನೂರು–ಕೆಸವತ್ತೂರು ಮಾರ್ಗವಾಗಿ ಮಲ್ಲಿಪಟ್ಟಣಕ್ಕೆ ಹಾಗೂ ಸಂಜೆ 5 ಗಂಟೆಗೆ ಮಲ್ಲಿಪಟ್ಟಣ–ಕೆಸವತ್ತೂರು–ಕೊಣನೂರು–ರಾಮನಾಥಪುರ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸಿದರೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎ. ಮಂಜು, ಗ್ರಾಮಸ್ಥರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಸವತ್ತೂರು ಮಾರ್ಗದಲ್ಲಿ ಶೀಘ್ರದಲ್ಲೇ ಬಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಶಾಸಕರ ಭರವಸೆಯಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲೇ ಬಸ್ ಸೇವೆ ಆರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
– ಕುಮಾರಸ್ವಾಮಿ ಎಂ.ಎನ್.
