ರಾಮನಾಥಪುರ, ಏಪ್ರಿಲ್ 12: ನಮ್ಮ ರಾಜ್ಯ ಹಾಗೂ ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾದ ಜನಗಣತಿಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ A. Manju ಕರೆ ನೀಡಿದರು.
ರಾಮನಾಥಪುರದ ಕವ್ಯಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2026-27ನೇ ಸಾಲಿನ ಜನಗಣತಿ ನಮ್ಮ ಜಿಲ್ಲೆ, ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ದಿಕ್ಕುನಿರ್ಧಾರ ಮಾಡುವ ಮಹತ್ವದ ಕಾರ್ಯವಾಗಿದೆ ಎಂದು ತಿಳಿಸಿದರು.
ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳ ಯೋಜನೆ ರೂಪಿಸಲು ಅಗತ್ಯವಾದ ಮಾಹಿತಿಯನ್ನು ಸಂಗ್ರಹಿಸುವಲ್ಲಿ ಜನಗಣತಿ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ನಿಖರವಾಗಿ ನೀಡಬೇಕು ಎಂದು ಮನವಿ ಮಾಡಿದರು.

ಏಪ್ರಿಲ್ 15ರವರೆಗೆ ನಾಗರಿಕರು ಆನ್ಲೈನ್ ಮೂಲಕ ಸ್ವಯಂ ಗಣತಿ ಪೋರ್ಟಲ್ನಲ್ಲಿ ತಮ್ಮ ಮಾಹಿತಿಯನ್ನು ನೋಂದಾಯಿಸಬಹುದು. ಮೊಬೈಲ್ ಫೋನ್ ಹಾಗೂ OTP ಮೂಲಕ ಈ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದಾಗಿದೆ. ಅಲ್ಲದೆ, ಏಪ್ರಿಲ್ 16ರಿಂದ ಮೇ 16ರವರೆಗೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗಣತಿ ಕಾರ್ಯ ನಡೆಸಲಿದ್ದಾರೆ ಎಂದರು.
ಈ ಮಹತ್ವದ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಸಹಕಾರ ನೀಡಬೇಕು ಎಂದು ಶಾಸಕರು ಎ. ಮಂಜು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಶಾಸಕರು ಭರತನಾಟ್ಯ ಪ್ರದರ್ಶನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
