ರಾಮನಾಥಪುರ: ಹೋಬಳಿಯ ರಾಮನಾಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರದನಹಳ್ಳಿ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇವಾಲಯದ ಸನ್ನಿಧಿಯಲ್ಲಿ ಶನಿವಾರ (ನ.14) ಚಂಡಿಕಾಹೋಮ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.

ದೇವಾಲಯದ ಸಂಸ್ಥಾಪಕ ಅಧ್ಯಕ್ಷರಾದ ವೇ. ನಾಗರಾಜಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇ. ನಾಗರಾಜಸ್ವಾಮಿ, ಭಾರತೀಯ ಸನಾತನ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ವಿಶೇಷ ಮಹತ್ವವಿದೆ. ಇಂತಹ ಹೋಮ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗಬೇಕು. ಈ ಸನ್ನಿಧಿಗೆ ಆಗಮಿಸುವ ಭಕ್ತರ ಇಷ್ಟಾರ್ಥಗಳು ಈಡೇರುತ್ತಿರುವ ನಂಬಿಕೆಯಿಂದ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ದೇವಾಲಯವು ಶಕ್ತಿಪೀಠವಾಗಿ ಬೆಳೆಯುತ್ತಿದೆ ಎಂದು ತಿಳಿಸಿದರು.

ಮರುತಮ್ಮನಹಳ್ಳಿಯ ವೇ. ಶೇಷಕುಮಾರಸ್ವಾಮಿ ಅವರು ಚಂಡಿಕಾಹೋಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಸ್. ಶಂಕರ್, ವಿಶ್ವ ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ದೇವಾಲಯದ ಅರ್ಚಕ ಶ್ರೀನಿವಾಸ್, ಮಸಣಿಕಮ್ಮ ದೇವಾಲಯದ ಅರ್ಚಕ ಸುನೀಲ್ ಕುಮಾರ್, ಗುತ್ತಿಗೆದಾರ ಲೋಕೇಶ್ ಸೇರಿದಂತೆ ಹಲವು ಭಕ್ತಾದಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
