ರಾಮನಾಥಪುರ: ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಹೂವು ಮತ್ತು ಹಣ್ಣಿನ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ₹8 ಲಕ್ಷ ವೆಚ್ಚದಲ್ಲಿ ಫುಡ್ಕೋರ್ಟ್ ಅಂಗಡಿಗಳ ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಅವರು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಶ್ರೀ ಬಸವೇಶ್ವರ ವೃತ್ತದಲ್ಲಿ ಹೂವು ಮತ್ತು ಹಣ್ಣಿನ ಅಂಗಡಿಗಳನ್ನು ನಡೆಸುವ ವ್ಯಾಪಾರಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಅಂಗಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ರಾಮನಾಥಪುರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸದಾ ಬದ್ಧರಾಗಿದ್ದೇನೆ ಎಂದು ತಿಳಿಸಿದರು.

ಅಂಗಡಿಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವುದರ ಜೊತೆಗೆ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ನಿಗದಿತ ಮಾನದಂಡಗಳಂತೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾವೇರಿ ನದಿ ಸೇತುವೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ
ಇದೇ ಸಂದರ್ಭದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಶಾಸಕ ಎ. ಮಂಜು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸೇತುವೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಕೆಆರ್ಡಿಸಿಎಲ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ನವೆಂಬರ್ ತಿಂಗಳ ಅಂತ್ಯದೊಳಗೆ ಕಾಮಗಾರಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ಸೇತುವೆ ಕಾಮಗಾರಿಯಲ್ಲಿ ಮತ್ತಷ್ಟು ವಿಳಂಬ ಮಾಡದೆ, ಶೀಘ್ರವಾಗಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ. ಮಂಜು ಸೂಚಿಸಿದರು.
ವರದಿ : ಕುಮಾರಸ್ವಾಮಿ ರಾಮನಾಥಪುರ
