ರಾಮನಾಥಪುರ, ಅ. 13: ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ರಾಮನಾಥಪುರದಲ್ಲಿ ವಾರದ ಸಂತೆ ನಡೆಸಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಸೂಕ್ತ ಜಾಗವಿದ್ದರೂ, ಮುಖ್ಯ ರಸ್ತೆಯಲ್ಲಿಯೇ ವ್ಯಾಪಾರ ವಹಿವಾಟು ನಡೆಯುತ್ತಿರುವುದು ವಿಪರ್ಯಾಸ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಸ್. ಶಂಕರ್ ಆರೋಪಿಸಿದರು.
ರಾಮನಾಥಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂತೆ ನಡೆಸಲು ಅಗತ್ಯ ಜಾಗವನ್ನು ಒದಗಿಸಲಾಗಿದೆ. ಆದರೂ ತಳ್ಳುಗಾಡಿ ವ್ಯಾಪಾರಿಗಳು ಸೇರಿದಂತೆ ಹಲವು ವ್ಯಾಪಾರಸ್ಥರು ಮುಖ್ಯ ರಸ್ತೆಯಲ್ಲಿಯೇ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದು, ಈಗಾಗಲೇ ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಆದ್ದರಿಂದ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುವವರನ್ನು ಗ್ರಾಮ ಪಂಚಾಯಿತಿ ಆವರಣದಲ್ಲಿರುವ ಮಾರುಕಟ್ಟೆಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿಗೆ ವಾರದ ಸಂತೆ, ವಾರ್ಷಿಕ ಜಾತ್ರೆಯ ಹರಾಜು, ಮೀನು ಮತ್ತು ಮಾಂಸದ ಅಂಗಡಿಗಳು, ಹೂವಿನ ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆ ಸೇರಿದಂತೆ ವಿವಿಧ ಮೂಲಗಳಿಂದ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದೆ. ಆದರೂ ವ್ಯಾಪಾರಸ್ಥರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ದುರದೃಷ್ಟಕರ ಎಂದು ದೂರಿದರು.
ಆದರೆ, ಸಂತೆ ಮೈದಾನದಲ್ಲಿ ವ್ಯಾಪಾರಸ್ಥರಿಗೆ ಅಗತ್ಯವಾದ ವಿದ್ಯುತ್, ಕುಡಿಯುವ ನೀರು ಮತ್ತು ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಆಗಮಿಸುವ ವ್ಯಾಪಾರಸ್ಥರಿಗೆ ತಮ್ಮ ಸರಕುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಹಾಗೂ ತಂಗಲು ಸೂಕ್ತ ವ್ಯವಸ್ಥೆಯಿಲ್ಲ. ಹೀಗಾಗಿ, ಸಂಬಂಧಪಟ್ಟ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಎಲ್ಲ ವ್ಯಾಪಾರಸ್ಥರು ಅಲ್ಲಿಯೇ ವ್ಯಾಪಾರ ನಡೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತವು ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ನಡುವೆ ಇದೆ. ಅರಕಲಗೂಡು, ಪಿರಿಯಾಪಟ್ಟಣ ಹಾಗೂ ಕೇರಳದ ಕಡೆಗೆ ಸಂಚರಿಸುವ ವಾಹನಗಳು ಇದೇ ಮುಖ್ಯ ರಸ್ತೆಯನ್ನು ಬಳಸುವುದರಿಂದ ರಸ್ತೆ ಬದಿಯಲ್ಲಿನ ಸಂತೆ ವ್ಯಾಪಾರ ವಾಹನ ಸವಾರರಿಗೆ ತೀವ್ರ ತೊಂದರೆಯುಂಟು ಮಾಡುತ್ತಿದೆ. ಅಲ್ಲದೆ, ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ರಾಮನಾಥಪುರದ ದೇವಾಲಯಗಳ ರಸ್ತೆಯಲ್ಲಿಯೂ ಮೀನು, ಕೋಳಿ ಸೇರಿದಂತೆ ವಿವಿಧ ಅಂಗಡಿಗಳು ವ್ಯಾಪಾರ ನಡೆಸುತ್ತಿವೆ. ಇಂತಹ ಅಂಗಡಿಗಳನ್ನು ಗ್ರಾಮ ಪಂಚಾಯಿತಿ ಆವರಣದಲ್ಲಿರುವ ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದು ಅವರು ಒತ್ತಾಯಿಸಿದರು.
ಸಂತೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಎಚ್.ಎಸ್. ಶಂಕರ್ ಹಾಗೂ ವ್ಯಾಪಾರಸ್ಥರು ಆಗ್ರಹಿಸಿದರು.
ಅಭಿವೃದ್ಧಿ ಅಧಿಕಾರಿಗಳ ಹೇಳಿಕೆ
ರಾಮನಾಥಪುರದ ಸಂತೆ ಮೈದಾನದಲ್ಲಿ ಈಗಾಗಲೇ ವಿದ್ಯುತ್ ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ಇನ್ನಷ್ಟು ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಾಥಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ತಿಳಿಸಿದರು.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
