ರಾಮನಾಥಪುರ: ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಟಿ. ಮಾಯಿಗೌಡನಹಳ್ಳಿ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆರೋಗ್ಯ ಉಪಕೇಂದ್ರ ಕಟ್ಟಡದ ಕಾಮಗಾರಿಗೆ ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಅವರು ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ದೊರೆಯುವಂತೆ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಈ ನೂತನ ಕಟ್ಟಡವು ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಆರು ತಿಂಗಳೊಳಗೆ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡುವಂತೆ ನಿರ್ದೇಶಿಸಿದರು.
ಈ ಆರೋಗ್ಯ ಉಪಕೇಂದ್ರ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆರೋಗ್ಯ ಸೇವೆಗಳು ಮತ್ತಷ್ಟು ಸುಲಭವಾಗಿ ಲಭ್ಯವಾಗಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
