ರಾಮನಾಥಪುರ, ಜೂ. 8: ಬಸವೇಶ್ವರ ವೃತ್ತದ ಸುತ್ತಮುತ್ತ ವ್ಯಾಪಾರ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಅವರು ರಾಮನಾಥಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗೆ ಸೂಚಿಸಿದರು.
ರಾಮನಾಥಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವೇಶ್ವರ ವೃತ್ತದಲ್ಲಿರುವ ಹೂವಿನ ಅಂಗಡಿಗಳು, ಹಣ್ಣಿನ ಅಂಗಡಿಗಳು, ಟೀ ಅಂಗಡಿಗಳು, ಎಳೆನೀರು ಅಂಗಡಿಗಳು ಸೇರಿದಂತೆ ವಿವಿಧ ಬೀದಿಬದಿ ವ್ಯಾಪಾರಿಗಳಿಗೆ ಕುಡಿಯುವ ನೀರು, ನೆರಳು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ವ್ಯಾಪಾರ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹತ್ತಾರು ಬೀದಿಬದಿ ವ್ಯಾಪಾರಿಗಳು ವಿವಿಧ ರೀತಿಯ ವ್ಯಾಪಾರ ನಡೆಸುತ್ತಿದ್ದು, ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪ್ರತಿಯೊಬ್ಬರಿಗೂ ಪರವಾನಗಿ (ಲೈಸೆನ್ಸ್) ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಶಾಸಕ ಎ. ಮಂಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಬೀದಿಬದಿ ವ್ಯಾಪಾರಿಗಳಿಗೆ ಕಡಿಮೆ ಕಂದಾಯ ನಿಗದಿ ಮಾಡಿ, ಸುಸೂತ್ರವಾಗಿ ವ್ಯಾಪಾರ ನಡೆಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಜೊತೆಗೆ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪ್ರತಿಯೊಬ್ಬ ವ್ಯಾಪಾರಿಗೂ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಸಿ. ಸೌಮ್ಯ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರೇವಣ್ಣ, ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಬೀದಿಬದಿ ವ್ಯಾಪಾರಿಗಳು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
