ರಾಮನಾಥಪುರ: ಕಾವೇರಿ ನದಿ ದಂಡೆಯಲ್ಲಿರುವ ಕಿರು ಸೇತುವೆ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಪೂರ್ಣಗೊಳ್ಳದೆ ವಿಳಂಬವಾಗಿರುವುದಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಎಸ್. ಶಂಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಿಂದ ರಾಮೇಶ್ವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಈ ಕಿರು ಸೇತುವೆ ಕಾಮಗಾರಿ ಲಕ್ಷಾಂತರ ವೆಚ್ಚದಲ್ಲಿ ಆರಂಭವಾದರೂ, ಇನ್ನೂ ಅಪೂರ್ಣವಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಈ ಸೇತುವೆ ನಿರ್ಮಾಣ ವಿಳಂಬದಿಂದ ಭಕ್ತರು ಮತ್ತು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ದೇವಸ್ಥಾನಗಳಿಗೆ ತೆರಳುವ ಭಕ್ತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ದೂರಿದರು.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಂಕರ್ ಎಚ್ಚರಿಸಿದರು.
