ರಾಮನಾಥಪುರ: ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಹೊರತರುವುದರ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ಆಯೋಜಕರು ಅಚ್ಚುಕಟ್ಟಾಗಿ ಪಂದ್ಯಾವಳಿಗಳನ್ನು ನಡೆಸಿ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಹೇಳಿದರು.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಗ್ರಾಮೀಣ ಮಕ್ಕಳಿಗೆ ಆರಂಭದಿಂದಲೇ ಗುಣಮಟ್ಟದ ಶಿಕ್ಷಣ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳನ್ನು ತೆರೆದಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕ್ರೀಡಾ ಚಟುವಟಿಕೆಗಳ ಜತೆಗೆ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿ ಹಾಗೂ ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಉನ್ನತ ವಿದ್ಯಾಭ್ಯಾಸ ಪಡೆಯಲು ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯವನ್ನು ರೂಪಿಸಬೇಕು ಎಂದು ಎ. ಮಂಜು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಮುಖ್ಯ ಶಿಕ್ಷಕ ರವಿಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಕುಮಾರಸ್ವಾಮಿ ರಾಮನಾಥಪುರ
