ಕೆ.ಆರ್.ಪೇಟೆ, ಜೂನ್ 30: ವಿದ್ಯಾರ್ಥಿಗಳು ಮೊಬೈಲ್ ಹಾಗೂ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ವ್ಯಸನಮುಕ್ತ ಬದುಕಿಗೆ ಸಂಕಲ್ಪ ಮಾಡಬೇಕು ಎಂದು ಕೆ.ಆರ್.ಪೇಟೆ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಮೋಹನ್ ಕರೆ ನೀಡಿದರು.
ಕೆ.ಆರ್.ಪೇಟೆ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿದ್ಯಾರ್ಥಿ ದೆಸೆಯಲ್ಲಿಯೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಮೊಬೈಲ್ ಹಾಗೂ ಮಾದಕ ವ್ಯಸನಗಳಿಂದ ದೂರವಿದ್ದು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯಾದ್ಯಂತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಸ್ವಾಸ್ಥ್ಯ ಸಂಕಲ್ಪ’ ಅಭಿಯಾನ ನಡೆಯುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ವ್ಯಸನಮುಕ್ತ ಬದುಕಿಗೆ ಸಂಕಲ್ಪ ಮಾಡಬೇಕು. ಆರೋಗ್ಯವೇ ನಿಜವಾದ ಭಾಗ್ಯವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತ್ಯಗತ್ಯವಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸುತ್ತವೆ. ಇಂದು ಮಾಡಿಕೊಳ್ಳುವ ಸಂಕಲ್ಪವನ್ನು ಜೀವನಪರ್ಯಂತ ಪಾಲಿಸಬೇಕು ಎಂದು ಅವರು ತಿಳಿಸಿದರು.
ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ನ ಗಂಜೀಗೆರೆ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು, ವ್ಯಸನಮುಕ್ತ ಸಮಾಜ ನಿರ್ಮಾಣ, ಮಾನಸಿಕ ಒತ್ತಡ ನಿರ್ವಹಣೆ ಹಾಗೂ ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ನ ಗಂಜೀಗೆರೆ ಮಹೇಶ್, ಉಪನ್ಯಾಸಕರಾದ ಆರ್.ಪಿ. ಪದ್ಮನಾಭ, ವಿನೋದ್ ಸಿಂಗ್, ಯೋಜನೆಯ ಮೇಲ್ವಿಚಾರಕಿ ಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
