ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(96) ಅವರು ಶುಕ್ರವಾರ ಮುಂಜಾನೆ ನಿಧನರಾದರು.
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಶ್ರೀ ಬಿ.ಎನ್.ಗರುಡಾಚಾರ್ ರವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು.
ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.
ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಾಲ್ಕಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
