ರಾಮನಾಥಪುರ: ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಉದ್ದೇಶದಿಂದ ಕೊಣನೂರು ಹೋಬಳಿಯ ಬಿಸಲಹಳ್ಳಿ ಗ್ರಾಮದಲ್ಲಿ 400ಕ್ಕೂ ಹೆಚ್ಚು ಪ್ರಬೇಧಗಳ ಸಸಿಗಳನ್ನು ನೆಟ್ಟು ಅಭಿವೃದ್ಧಿಪಡಿಸಿರುವ ‘ಸಹಬಾಳ್ವೆ ಉದ್ಯಾನವನ’ದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ನಮ್ಮ ದೇಶದ ಸಂವಿಧಾನವನ್ನು ಅಂಗೀಕರಿಸಿದ ದಿನದಂದು ನಡೆಯಲಿರುವ ಈ ವಿಶೇಷ ಕಾರ್ಯಕ್ರಮವು ವಿವಿಧ ಮಠಾಧೀಶರು ಹಾಗೂ ಗಣ್ಯರ ಸಾನ್ನಿಧ್ಯದಲ್ಲಿ ನೆರವೇರಲಿದೆ.

ಕಾರ್ಯಕ್ರಮಕ್ಕೆ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಅಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬೆಂಗಳೂರಿನ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಶ್ರದ್ಧಾ ಅಮಿತ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ರಾಮನಾಥಪುರ ಸಮೀಪದ ಬಿಸಲಹಳ್ಳಿ ಗ್ರಾಮದಲ್ಲಿ ರೂಪುಗೊಂಡಿರುವ ಈ ಉದ್ಯಾನವನವು 400ಕ್ಕೂ ಹೆಚ್ಚು ಪ್ರಬೇಧಗಳ ಸಸ್ಯಸಂಪತ್ತನ್ನು ಹೊಂದಿದ್ದು, ಪರಿಸರ ಪ್ರೇಮಿಗಳಿಗೆ ಹಾಗೂ ಮುಂದಿನ ಪೀಳಿಗೆಗೆ ಪ್ರಕೃತಿಯ ಮಹತ್ವವನ್ನು ಪರಿಚಯಿಸುವ ಮಹತ್ವದ ತಾಣವಾಗಲಿದೆ.

ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಪರಿಸರಾಸಕ್ತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಸದಸ್ಯರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪರಿಸರಕ್ಕಾಗಿ ನಾವು – ಹಸಿರು ಉಳಿಸಿ, ಸಹಬಾಳ್ವೆ ಬೆಳೆಸೋಣ ಎಂಬ ಆಶಯದೊಂದಿಗೆ ಈ ಉದ್ಯಾನವನದ ಲೋಕಾರ್ಪಣೆ ನಡೆಯಲಿದೆ.
- ಕುಮಾರಸ್ವಾಮಿ ಎಂ.ಎನ್.
