ಸಕಲೇಶಪುರ: ತಾಲೂಕಿನ ಬಿಸಿಲೆಘಾಟ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡಿದ್ದಾರೆ.
ಮಡಿಕೇರಿ/ವನಗೂರು ಗ್ರಾಮದಿಂದ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ KA-12-B-2579 ನಂಬರಿನ ಮಿನಿ ಬಸ್ ಬಿಸಿಲೆಘಾಟ್ನ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ಸಂದರ್ಭದಲ್ಲಿ ಬಸ್ನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಇದ್ದರು. ಅವರ ಪೈಕಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳು ಮತ್ತು 20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಸುಬ್ರಹ್ಮಣ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನು ಓದು: ಹೇಮಗಂಗೋತ್ರಿ ಅರಣ್ಯ ಪ್ರದೇಶದಲ್ಲಿ ಅಜ್ಞಾತ ಪುರುಷನ ಶವ ಪತ್ತೆ
ಘಟನೆಯು ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಲಾಗಿದೆ.

ಸ್ಥಳೀಯರು ತೀವ್ರ ತಿರುವುಗಳು ಮತ್ತು ರಸ್ತೆ ಕುಸಿತದ ಬಗ್ಗೆ ಎಚ್ಚರಿಕೆ ನೀಡಿದ್ದರೂ, ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ ಇಂತಹ ಅಪಘಾತಗಳು ಮರುಕಳಿಸುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
