ಸಕಲೇಶಪುರ, ಏ.1: ಸಕಲೇಶಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾದೇವಿ ಅವರು ಇಂದು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಉಮಾದೇವಿ, ಭಾಗ್ಯಲಕ್ಷ್ಮಿ ಬಾಂಡ್ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳಿಂದ ಲಂಚ ಸ್ವೀಕರಿಸುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
ಈ ಆರೋಪಗಳ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಸಕಲೇಶಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ದಾಳಿ ನಡೆಸಿದರು. ಈ ವೇಳೆ ಉಮಾದೇವಿ ಅವರು ಕಚೇರಿಯಲ್ಲೇ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತಾಗಿ ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ಸಕಲೇಶಪುರದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಲಂಚದ ಆರೋಪಗಳು ಮತ್ತೆ ಬೆಳಕಿಗೆ ಬಂದಂತಾಗಿದೆ.
