ಶ್ರವಣಬೆಳಗೊಳ: ಹಾಸನ ಜಿಲ್ಲೆಯ ಸಹಕಾರಿ ವ್ಯವಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನೀಡಿದ ಆರ್ಥಿಕ ನೆರವು ಹಾಗೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಸಲ್ಲಿಸಿದ ಕೊಡುಗೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಶ್ರವಣಬೆಳಗೊಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಮುಂಭಾಗದಲ್ಲಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ರಾಜ್ಯ ಸಹಕಾರ ಮಹಾಮಂಡಳಿ ಹಾಗೂ ತಾಲ್ಲೂಕಿನ ಸಹಕಾರಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚನ್ನರಾಯಪಟ್ಟಣ ತಾಲ್ಲೂಕಿನ 52 ಸಾವಿರ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ವಿತರಿಸಲಾಗುತ್ತಿದೆ. ಈವರೆಗೆ ರೈತರಿಗೆ 335 ಕೋಟಿ ರೂ. ಸಾಲ ನೀಡಲಾಗಿದ್ದು, ಬರಗಾಲ ಹಾಗೂ ಬೆಳೆ ನಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂರು ಬಾರಿ ಒಟ್ಟು 550 ಕೋಟಿ ರೂ. ಸಾಲ ಮನ್ನಾ ಮಾಡಿರುವುದು ರೈತರಿಗೆ ಅನುಕೂಲವಾಗಿದೆ ಎಂದರು.

ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ 348 ಶಾಶ್ವತ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಹೈನುಗಾರಿಕೆಯಿಂದ ಪ್ರತಿದಿನ 2.75 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹಾಲಿನ ಗುಣಮಟ್ಟ ಕಾಪಾಡಲು 53 ಬಲ್ಕ್ ಮಿಲ್ಕ್ ಕೂಲರ್ಗಳನ್ನು ಅಳವಡಿಸಲಾಗಿದೆ. ಆದರೆ, ಪಶುವೈದ್ಯರ ಕೊರತೆಯಿಂದ ಜಾನುವಾರುಗಳ ಆರೋಗ್ಯ ತಪಾಸಣೆಗೆ ತೊಂದರೆಯಾಗುತ್ತಿದೆ. ಒಟ್ಟು 25 ಪಶುವೈದ್ಯರ ಹುದ್ದೆಗಳು ಖಾಲಿಯಿದ್ದು, ಸರ್ಕಾರ ಕೂಡಲೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಹಾಲಿನ ದರ ಹೆಚ್ಚಿಸಿರುವುದನ್ನು ಸ್ವಾಗತಿಸಿದ ಅವರು, ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಲು ಸ್ವಂತ ಬಂಡವಾಳ ಕ್ರೋಢೀಕರಣಕ್ಕೆ ಆದ್ಯತೆ ನೀಡಬೇಕು. ರೈತರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿಸಬೇಕು ಎಂದು ಸಲಹೆ ನೀಡಿದರು.
ಸುಮಾರು 900 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿಯನ್ನು ಜನವರಿಯಲ್ಲಿ ಪ್ರಧಾನಿ, ಮಾಜಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಉದ್ಘಾಟಿಸಲು ಉದ್ದೇಶಿಸಲಾಗಿದೆ. ನೂತನ ಡೈರಿಯಿಂದ ವಾರ್ಷಿಕ 1,040 ಕೋಟಿ ರೂ. ವಹಿವಾಟಿನ ನಿರೀಕ್ಷೆಯಿದ್ದು, ಹಾಲಿನ ಪೆಟ್ ಬಾಟಲ್, ಐಸ್ಕ್ರೀಂ ಸೇರಿದಂತೆ ವಿವಿಧ ಉತ್ಪನ್ನಗಳ ಮಾರಾಟದಿಂದ ದೊರೆಯುವ ಲಾಭವನ್ನು ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರಿಗೆ ಹಂಚಿಕೆ ಮಾಡಲಾಗುವುದು. ರೈತರು ಪಹಣಿ ಸೇರಿದಂತೆ ಕಂದಾಯ ದಾಖಲೆಗಳನ್ನು ಸಹಕಾರಿ ಸಂಘಗಳಲ್ಲಿಯೇ ಪಡೆಯುವ ವ್ಯವಸ್ಥೆಯೂ ಇದೆ ಎಂದರು.

ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣದಿಂದ ಸಹಕಾರಿ ಕ್ಷೇತ್ರಕ್ಕೆ ಆಗುತ್ತಿರುವ ಅನುಕೂಲಗಳ ಕುರಿತು ಉಪನ್ಯಾಸಕ ಗಿರೀಶ್ ಕುಮಾರ್ ಮಾತನಾಡಿ, ಭಾರತದಲ್ಲಿ ಸುಮಾರು 8.53 ಲಕ್ಷ ಸಹಕಾರಿ ಸಂಘಗಳಿದ್ದು, ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ದೇಶದಲ್ಲಿ 32 ಕೋಟಿ ಸಹಕಾರಿ ಸದಸ್ಯರಿದ್ದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ವಿಂಧ್ಯಗಿರಿ ಮಹಾದ್ವಾರದ ಬಳಿ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು. ಅಲಂಕರಿಸಿದ ಮೂರು ಜೋಡಿ ಹೋರಿಗಳು, 101 ಕಳಸ ಹೊತ್ತ ಮಹಿಳೆಯರು, ವೀರಗಾಸೆ ಹಾಗೂ ಕೋಲಾಟ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ತಾಲ್ಲೂಕಿನ ವಿವಿಧ ಸಹಕಾರಿ ಸಂಘಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಧುರೀಣರು, ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿ ಸದಸ್ಯರು ಹಾಗೂ ಕಲಾತಂಡಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಜಿ.ಎಚ್. ಸಿದ್ದೇಶ್, ರಾಜ್ಯ ಸಹಕಾರ ಮಾರಾಟ ಮಂಡಳಿ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಹೇಮಾವತಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ತೋಟಿ ಜಯರಾಂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶೇಖರಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಜಿ.ಎಸ್. ಕೌಶಿಕ್, ಟಿಎಪಿಸಿಎಂಎಸ್ ಅಧ್ಯಕ್ಷ ತೋಟಿ ನಾಗರಾಜು, ಶ್ರವಣಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಆರ್. ಜೀವನ್, ಕೆಎಂಎಫ್ ಪ್ರಧಾನ ವ್ಯವಸ್ಥಾಪಕ ರೂಪೇಶ್ ಕುಮಾರ್ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
