ರಾಮನಾಥಪುರ: ಪುರಾಣ ಪ್ರಸಿದ್ಧ ದೇವಾಲಯಗಳ ಬೀಡು ಹಾಗೂ ‘ದಕ್ಷಿಣ ಕಾಶಿ’ ಎಂದೇ ಖ್ಯಾತಿ ಪಡೆದಿರುವ ರಾಮನಾಥಪುರ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮಹಾರಥೋತ್ಸವ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.
ರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ದೇವಾಲಯದ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸುಮಾರು 20 ಅಡಿ ಎತ್ತರದ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ವಿವಿಧ ಬಣ್ಣಗಳ ಬಟ್ಟೆ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥವನ್ನು ಮಂಗಳವಾದ್ಯಗಳೊಂದಿಗೆ ನೂರಾರು ಭಕ್ತರು ಭಕ್ತಿಭಾವದಿಂದ ಎಳೆದರು. ದೇವಾಲಯದ ಮುಂಭಾಗದಿಂದ ರಾಜಬೀದಿಯ ಮೂಲಕ ರಥವನ್ನು ಎಳೆದುಕೊಂಡು ಹೋಗಿ, ಬಳಿಕ ಮತ್ತೆ ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು.

ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದು ಭಕ್ತಿ ಪರವಶರಾದರು. ರಥೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ದೀವಾನರಾದ ಬಾಬಣ್ಣ, ಮುಖ್ಯ ಅರ್ಚಕ ವೇ. ಶ್ರೀನಾಥ್ ಸೇರಿದಂತೆ ದೇವಾಲಯದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
