ಹಾಸನ, ಮಾ.14: ಇದೇ ತಿಂಗಳ 18ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಗರದ ತಮ್ಮ ಕಚೇರಿಯಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಪರೀಕ್ಷಾ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲಾದ್ಯಂತ ಒಟ್ಟು 78 ಪರೀಕ್ಷಾ ಕೇಂದ್ರಗಳು ತೆರೆಯಲಾಗಿದೆ. ಈ ಬಾರಿ 19,097 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಎಂ. ಪಟೇಲ್, ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸಮರ್ಪಕ ಬೆಳಕು ಹಾಗೂ ಮೂಲಭೂತ ಸೌಲಭ್ಯಗಳು ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪರೀಕ್ಷಾ ವೇಳೆ ಏನೇ ಸಮಸ್ಯೆ ಎದುರಾದರೂ ತಕ್ಷಣ ಸ್ಪಂದಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
