ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 72,186 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಲಾಗಿದೆ. ಇದರಲ್ಲಿ 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದ್ದು, ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಭರ್ತಿಗೂ ಅನುಮೋದನೆ ನೀಡಲಾಗಿದೆ.
ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಸಂಬಂಧ ಆಯ್ಕೆ ಪ್ರಾಧಿಕಾರಗಳಿಂದ ಕ್ರಿಯಾ ಯೋಜನೆಗಳನ್ನು ಪಡೆದು ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲಾಗಿತ್ತು. ಅದರಂತೆ ಸಚಿವ ಸಂಪುಟವು 17 ಇಲಾಖೆಗಳ ನೇರ ನೇಮಕಾತಿ ಹುದ್ದೆಗಳ ಭರ್ತಿ ಪ್ರಕ್ರಿಯೆಯ ಮೇಲುಸ್ತುವಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ವಹಿಸಿದೆ.
ಇನ್ನೂ 34 ಇಲಾಖೆಗಳ ನೇರ ನೇಮಕಾತಿ ಹುದ್ದೆಗಳ ಭರ್ತಿ ಪ್ರಕ್ರಿಯೆಯ ಮೇಲುಸ್ತುವಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರವು ಎಲ್ಲಾ ಇಲಾಖೆಗಳಿಗೆ ಮುಂದಿನ 2 ತಿಂಗಳೊಳಗೆ ನೇಮಕಾತಿ ಅಧಿಸೂಚನೆಗಳನ್ನು ಪ್ರಕಟಿಸಲು, 4 ತಿಂಗಳೊಳಗೆ ನೇಮಕಾತಿ ಪರೀಕ್ಷೆಗಳನ್ನು ನಡೆಸಲು ಹಾಗೂ 6 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನೇಮಕಾತಿ ಆದೇಶಗಳನ್ನು ಕಡ್ಡಾಯವಾಗಿ ಹೊರಡಿಸಲು ಸೂಚಿಸಿದೆ.
ಈ ಸಂಬಂಧದ ಆದೇಶವನ್ನು ಸಚಿವ ಸಂಪುಟ ಪ್ರಕರಣ ಸಂಖ್ಯೆ ಸಿ 332/2026ರಲ್ಲಿ ದಿನಾಂಕ 20-06-2026ರಂದು ಸಚಿವ ಸಂಪುಟ ನೀಡಿದ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ) ಹೊರಡಿಸಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

