ಹಾಸನ: ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಹಾಗೂ ಆರೋಗ್ಯಕರ ಬಳಕೆ ಕುರಿತು ಪತ್ರಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 7ರಂದು ಬೆಳಿಗ್ಗೆ 10.30ಕ್ಕೆ ನಗರದ ಪತ್ರಕರ್ತರ ಭವನದಲ್ಲಿ “ಸ್ಟಡಿ ವಿತ್ ಸೊಸೈಟಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಕೋಟೆ ಹಾಗೂ ಬದ್ರುದೀನ್ ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ಹಕ್ಕು ಕಾಯ್ದೆಯ ಬಳಕೆ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಸನ್ನ ಹಾಡ್ಲಹಳ್ಳಿ ತಿಳಿಸಿದ್ದಾರೆ.
ಪತ್ರಿಕಾ ವೃತ್ತಿಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಬಳಕೆ ಬಹಳ ಮಹತ್ವದ್ದಾಗಿದ್ದು, ಈ ಕುರಿತು ಹೆಚ್ಚಿನ ತಿಳುವಳಿಕೆ ಪಡೆಯಲು ಪತ್ರಕರ್ತರಿಗೆ ಇದು ಉತ್ತಮ ಅವಕಾಶವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪತ್ರಿಕಾ ಮಿತ್ರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಸುರೇಶ್, ಜನಮಿತ್ರ ಪತ್ರಿಕೆಯ ಸಂಪಾದಕ ನವೀನ್ ಸಿ.ಆರ್., ಪ್ರಸನ್ನ, ಪ್ರಕಾಶ್, ಮಲ್ಲಿಕಾರ್ಜುನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.