ಅರಕಲಗೂಡು: ತಾಲ್ಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ‘ಮಕ್ಕಳ ಮನೆ’ ಯೋಜನೆಯಡಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಿ, ಕಾನ್ವೆಂಟ್ ಶಾಲೆಗಳಿಗೆ ಸಮಾನವಾಗಿ ಗುಣಮಟ್ಟದ ಪ್ರಿಸ್ಕೂಲ್ ಶಿಕ್ಷಣ ನೀಡುತ್ತಿರುವುದನ್ನು ಮಾಜಿ ಸಚಿವರು ಹಾಗೂ ಶಾಸಕರಾದ A. Manju ಪ್ರಶಂಸಿಸಿದರು.

ರಾಮನಾಥಪುರ ಸಮೀಪದ ದೊಡ್ಡಮಗ್ಗೆ ಹೋಬಳಿ ಬೆಳವಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೆ.ಪಿ.ಎಸ್. ಶಾಲೆ ಹಾಗೂ ‘ಮಕ್ಕಳ ಮನೆ’ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಮಕ್ಕಳಿಗೆ ಪ್ರಾರಂಭಿಕ ಹಂತದಲ್ಲೇ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಂಡಿದ್ದು, ಯಾವುದೇ ಶುಲ್ಕವಿಲ್ಲದೆ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಶಿಕ್ಷಣ ನೀಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 18 ಶಾಲೆಗಳಲ್ಲಿ ‘ಮಕ್ಕಳ ಮನೆ’ ಯೋಜನೆ ಪ್ರಾರಂಭವಾಗಿದ್ದು, ಪ್ರಸ್ತುತ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ರಾಮನಾಥಪುರ, ಕೊಣನೂರು, ದೊಡ್ಡಮಗ್ಗೆ ಹೋಬಳಿ ಹಾಗೂ ಹಳ್ಳಿಮೈಸೂರು ಭಾಗಗಳಲ್ಲಿಯೂ ಈ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಅವರು, ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಈ ಯೋಜನೆಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್,ಕಾರ್ಯನಿರ್ವಹಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
