ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಕ್ಟೋಬರ್ 23ರಿಂದ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು ಸರ್ಕಾರ, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್ಗೆ ತುರ್ತು ಮನವಿ ಸಲ್ಲಿಸಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸೂಚಿಸಿದ್ದರೂ ಕರ್ನಾಟಕ ಸರ್ಕಾರ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿದೆ. ಇದರಿಂದ ರಾಜ್ಯದ ಸುಮಾರು ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಬೆಳೆಯಲು ತೊಂದರೆಯಾಗಲಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತಮಿಳುನಾಡು ಸರ್ಕಾರದ ಪರ ವಕೀಲ ಬಿ. ಕರುಣಾಕರನ್ ವಾದ ಮಂಡಿಸಿ, ಕಾವೇರಿ ನ್ಯಾಯಮಂಡಳಿ ನೀರು ಹಂಚಿಕೆ ಕುರಿತು ನೀಡಿರುವ ಆದೇಶಗಳನ್ನು ಕರ್ನಾಟಕ ನಿರಂತರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರವಾಹದ ಸಂದರ್ಭದಲ್ಲಿ ಜಲಾಶಯಗಳಲ್ಲಿ ಹೆಚ್ಚುವರಿ ನೀರು ಸಂಗ್ರಹವಾದಾಗ ಮಾತ್ರ ಕರ್ನಾಟಕ ನೀರು ಬಿಡುಗಡೆ ಮಾಡಿದೆ. ಇದೀಗ ನೀರು ಹರಿಸದಿರುವುದರಿಂದ ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಅಪಾಯ ಎದುರಾಗಿದೆ. ರೈತರ ಹಿತದೃಷ್ಟಿಯಿಂದ ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ಮತ್ತೊಮ್ಮೆ ನ್ಯಾಯಾಂಗದ ಅಂಗಳ ತಲುಪಿದ್ದು, ಮುಂದಿನ ಬೆಳವಣಿಗೆಗಳತ್ತ ಎರಡೂ ರಾಜ್ಯಗಳ ರೈತರು ಹಾಗೂ ಸಾರ್ವಜನಿಕರ ಗಮನ ನೆಟ್ಟಿದೆ.
