ಕೊರಟಗೆರೆ :- ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರತಿವರ್ಷ ಮರಳಿ ಬಂದು ಪ್ರಸ್ತುತ ವಿದ್ಯಾರ್ಥಿಗಳಿಗೆ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸೇವಾಭಾವ ಮೆರೆದಿರುವುದು ಶ್ಲಾಘನೀಯ ಎಂದು ತಾಲೂಕಿನ ಕೋಳಾಲ ಗ್ರಾಮದ ಶ್ರೀ ಬಸವೇಶ್ವರ ಕೇಂದ್ರೀಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪಿ.ಜಿ. ಪುಟ್ಟಗಂಗಯ್ಯ ಹೇಳಿದರು.
ಶಾಲಾ ಆವರಣದಲ್ಲಿ 2000-01ನೇ ಸಾಲಿನ ಎಸ್ಎಸ್ಎಲ್ಸಿ ಹಳೆ ವಿದ್ಯಾರ್ಥಿಗಳ ಬಳಗ ಆಯೋಜಿಸಿದ್ದ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಏಕಾಗ್ರತೆಯಿಂದ ಅಧ್ಯಯನ ಮಾಡಿ ಉತ್ತಮ ಅಂಕ ಗಳಿಸಿದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
2000-01ನೇ ಸಾಲಿನ ಹಳೆ ವಿದ್ಯಾರ್ಥಿಗಳು ಕಲಿತ ಶಾಲೆಯ ಋಣ ತೀರಿಸುವ ಉದ್ದೇಶದಿಂದ ಪ್ರತಿವರ್ಷ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಮಾದರಿ ಕಾರ್ಯವಾಗಿದೆ. ಈ ಬಾರಿಯೂ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ವಿತರಿಸಿರುವುದು ಅಭಿನಂದನಾರ್ಹ ಎಂದು ಹೇಳಿದರು.
ಶಾಲೆಯಲ್ಲಿ ವ್ಯಾಸಂಗ ಮಾಡಿದ ಅನೇಕ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಇಲಾಖೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಬದುಕಿನಲ್ಲಿ ಯಶಸ್ಸು ಕಂಡ ಬಳಿಕವೂ ಶಾಲೆ ಹಾಗೂ ಶಿಕ್ಷಕರ ಮೇಲಿನ ಗೌರವವನ್ನು ಉಳಿಸಿಕೊಂಡು ಸೇವಾಕಾರ್ಯದಲ್ಲಿ ತೊಡಗಿರುವುದು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಾಬಸ್ಪೇಟೆ ಹೋಬಳಿಯ ನೇರಳಾಪುರದ ಪೊಲೀಸ್ ಇಲಾಖೆಯ ಶಾಂತಮೂರ್ತಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಪ್ರತಿವರ್ಷ ನಗದು ಬಹುಮಾನ ನೀಡಿ ಪ್ರೋತ್ಸಾಹಿಸುತ್ತಿರುವ ಸೇವೆಯನ್ನು ಇದೇ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂದಿಸಿತು.
ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಕೇಂದ್ರೀಯ ಕಾಲೇಜಿನ ಉಪನ್ಯಾಸಕ ಕೆ.ಎಸ್. ನರಸಿಂಹಮೂರ್ತಿ, ಶಿಕ್ಷಕರಾದ ನಟರಾಜು, ನಂಜುಂಡಪ್ಪ, ಮಂಜುನಾಥ್, ಲಕ್ಷ್ಮೀನಾರಾಯಣ ಹಾಗೂ 2000-01ನೇ ಸಾಲಿನ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
