ಕೊರಟಗೆರೆ: ತಾಲೂಕಿನ ಕೋಳಾಲ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಗಣಪತಿ ಮಂಡಳಿ ವತಿಯಿಂದ 5ನೇ ವರ್ಷದ ಗಣೇಶ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಗಣೇಶೋತ್ಸವದ ಅಂಗವಾಗಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಅನ್ನ ಪ್ರಸಾದ ವಿತರಿಸಲಾಯಿತು. ಬಳಿಕ ಯುವಕರ ನೇತೃತ್ವದಲ್ಲಿ ಗಣೇಶ ಮೂರ್ತಿಯ ಅದ್ದೂರಿ ಮೆರವಣಿಗೆ ನಡೆಯಿತು. ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸದಸ್ಯ ಕೆಂಪನರಸಿಂಹಯ್ಯ, ಗಣೇಶೋತ್ಸವವು ಹಿರಿಯರು, ಯುವಕರು ಹಾಗೂ ಮಕ್ಕಳನ್ನು ಒಗ್ಗೂಡಿಸುವ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ವೇದಿಕೆಯಾಗಿದೆ ಎಂದು ಹೇಳಿದರು.
ಹಿಂದೆ ಜನರನ್ನು ಒಗ್ಗೂಡಿಸುವ ಉದ್ದೇಶದಿಂದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ರೀತಿಯಲ್ಲಿ ಇಂದಿಗೂ ಯಾವುದೇ ಜಾತಿ, ಭೇದ ಹಾಗೂ ಪಕ್ಷಪಾತವಿಲ್ಲದೆ ಎಲ್ಲರೂ ಒಗ್ಗೂಡಿ ಗಣೇಶೋತ್ಸವ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು.

ಯುವಕರು ಹಾಗೂ ಗ್ರಾಮಸ್ಥರು ಸಂಘಟಿತರಾಗಿ ಗ್ರಾಮದ ಅಭಿವೃದ್ಧಿ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಗ್ರಾಮಸ್ಥರಲ್ಲಿ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಭಾವನೆ ಮೂಡುತ್ತದೆ ಎಂದು ತಿಳಿಸಿದರು.
ಗಣೇಶನಿಗೆ ಎಲ್ಲಾ ಶುಭಕಾರ್ಯಗಳಲ್ಲೂ ಪ್ರಥಮ ಪೂಜೆ ಸಲ್ಲಿಸುವ ಸಂಪ್ರದಾಯವಿದ್ದು, ಜಾತಿ-ಭೇದವಿಲ್ಲದೆ ಎಲ್ಲರೂ ಭಕ್ತಿಯಿಂದ ಗಣೇಶನನ್ನು ಆರಾಧಿಸುತ್ತಾರೆ.

ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಕೆಂಪನರಸಿಂಹಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಮುಖಂಡರು, ಗ್ರಾಮಸ್ಥರು, ಭಕ್ತರು, ಗಣಪತಿ ಮಂಡಳಿ ಸದಸ್ಯರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ನರಸಿಂಹಯ್ಯ, ಹೊಸಕೋಟೆ
