ಆಲೂರು : ಮಕ್ಕಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವುದರ ಮೂಲಕ ವೈಜ್ಞಾನಿಕ ಚಿಂತನೆಯನ್ನು ವೃದ್ಧಿಸುವುದೇ ಶಿಕ್ಷಣದ ಪ್ರಮುಖ ಉದ್ದೇಶವಾಗಿದ್ದು, ನಮ್ಮ ಸಂವಿಧಾನದ ಪೀಠಿಕೆ ಇದನ್ನೇ ಒತ್ತಿಹೇಳುತ್ತದೆ ಎಂದು ತಾಲ್ಲೂಕು ಸ್ಕೌಟ್ಸ್ ಗೈಡ್ಸ್ ಸಹ ಕಾರ್ಯದರ್ಶಿ ಹಾಗೂ ಸ್ಕೌಟ್ ಮಾಸ್ಟರ್ ಎಚ್.ಡಿ. ಕುಮಾರ್ ಅಭಿಪ್ರಾಯಪಟ್ಟರು.
ಅವರು ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ, ಆಲೂರು ಹಾಗೂ ಇಕೋ ಕ್ಲಬ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳೂರು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ ೧೯೩೦ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.

ರಾಷ್ಟ್ರೀಯ ವಿಜ್ಞಾನ ದಿನವನ್ನು ಭಾರತದಲ್ಲಿ ಪ್ರತಿವರ್ಷ ಫೆಬ್ರವರಿ ೨೮ ರಂದು ಆಚರಿಸಲಾಗುತ್ತದೆ. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ ವಿ ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ ಎಂದು. ಅವರು ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ, ೧೮೮೮ರ ನವೆಂಬರ್ ೭ರಂದು. ಅವರ ತಂದೆ ಚಂದ್ರಶೇಖರ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ದೈನಂದಿನ ಜೀವನದಲ್ಲಿ ವಿಜ್ಞಾನದ ಪಾತ್ರ ಮತ್ತು ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಬಳಸಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕಡೆಗೆ ಆಸಕ್ತಿ ಮೂಡಿಸಲು ಮತ್ತು ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಪ್ರೇರೇಪಿಸಲು ಶಾಲೆ-ಕಾಲೇಜುಗಳಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಸಮಾಜದಲ್ಲಿ ಮೂಢನಂಬಿಕೆಗಳನ್ನು ತೊರೆದುವೈಜ್ಞಾನಿಕ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸಲು ಪ್ರೋತ್ಸಾಹಿಸಲಾಗುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯಿಂದ ಸುಸ್ಥಿರ ಭವಿಷ್ಯವನ್ನು ಹೇಗೆ ನಿರ್ಮಿಸಬಹುದು ಎಂಬುದರ ಬಗ್ಗೆ ಚರ್ಚೆ ಮತ್ತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಎಂ. ವರದರಾಜು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನ ಎಲ್ಲ ಭಾರತೀಯರೂ ಒಂದಾಗಿ, ವಿಜ್ಞಾನದ ಶಕ್ತಿಯನ್ನು ಸಂಭ್ರಮಿಸುವ ಸಂದರ್ಭವಾಗಿದೆ. ಇದು ವೈಜ್ಞಾನಿಕ ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆ ಒದಗಿಸುತ್ತದೆ, ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ, ಮತ್ತು ಭಾರತದಲ್ಲಿ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬೆಂಬಲ ನೀಡುತ್ತದೆ. ವಿಜ್ಞಾನ ದಿನದಂದು ಭಾರತದಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು, ವಿಚಾರ ಗೋಷ್ಠಿಗಳು, ಕಾರ್ಯಾಗಾರಗಳು, ಮತ್ತು ಸಾರ್ವಜನಿಕ ಉಪನ್ಯಾಸಗಳನ್ನು ಆಯೋಜಿಸಲಾಗುತ್ತದೆ ಎಂದರು.

ಭಾರತ್ ಸ್ಕೌಟ್ಸ್ ಗೈಡ್ಸ್ ಆಲೂರು ತಾಲ್ಲೂಕು ಕಾರ್ಯದರ್ಶಿ ಹಾಗೂ ತಾಳೂರು ಶಾಲೆಯ ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್. ಉಪ್ಪಾರ್ ಮಾತನಾಡಿ ಸಾಮಾಜಿಕ ಮೌಢ್ಯಗಳನ್ನು ಧಿಕ್ಕರಿಸಲು ವೈಜ್ಞಾನಿಕ ಮನೋವೃತ್ತಿ ಅತ್ಯವಶ್ಯಕ. ಚಿಕ್ಕ ವಯೋಮಾನದಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಆಲೋಚನೆಗಳನ್ನು ಬಿತ್ತುವುದರ ಮುಖೇನ ವೈಚಾರಿಕ ಪ್ರಜ್ಞೆಯನ್ನುಂಟು ಮಾಡುವುದು ನಾಗರಿಕರಾದ ನಮ್ಮೆಲ್ಲರ ಬಹುದೊಡ್ಡ ಜವಬ್ದಾರಿಯಾಗಿದೆ. ಪ್ರತಿ ಆಚರಣೆಗಳೂ ಸಹ ತನ್ನದೇಯಾದ ಮಹತ್ವವನ್ನು ಹೊಂದಿರುತ್ತವೆ. ಅವುಗಳ ಗುರಿ-ಉದ್ಧೇಶಗಳನ್ನು ಗ್ರಹಿಸಿ, ಅಳವಡಿಸಿಕೊಳ್ಳಬೇಕಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕಿ ವಿ.ರವಿತ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಅತಿಥಿ ಶಿಕ್ಷಕಿ ಭಾಗ್ಯಮ್ಮ ಹಾಗೂ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
